ಲಿಂಗಸುಗೂರು ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತು ಸಭೆ ನಡೆಯಿತು. ಉಪ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಶಿ, ಗ್ರೇಡ್-2 ತಹಸೀಲ್ದಾರ್ ಬಸವರಾಜ ಝಳಕಿಮಠ, ಟಿಎಚ್‌ಒ ಅಮರೇಶ ಪಾಟೀಲ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ, ಅಂಗನವಾಡಿ ಮೇಲ್ವಿಚಾರಕಿ ಗುರುಬಸಮ್ಮ, ಗದ್ದೆಪ್ಪ ಇತರರಿದ್ದರು.
ಲಿಂಗಸುಗೂರು: ತಾಲೂಕಾದ್ಯಂತ ಜೂ.28ರಿಂದ ಜು.1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಬಸವರಾಜ ಝಳಕಿಮಠ ಹೇಳಿದರು.
ನಗರದ ತಾಲೂಕು ಆಡಳಿತ ಸೌಧದಲ್ಲಿ ಆರೋಗ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಪೋಲಿಯೋಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರ ಉತ್ತೇಜನ ನೀಡಿದೆ. ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕಾ ಕಾರ್ಯಕ್ರಮ ಯಶಸ್ಸುಗೊಳಿಸಬೇಕು ಎಂದರು.
ಜಿಲ್ಲಾ ಉಪ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಶಿ ಮಾತನಾಡಿ, ಐದು ವರ್ಷದೊಳಗಿನ ಮಕ್ಕಳು ಪಟ್ಟಣ ಪ್ರದೇಶದಲ್ಲಿ 1,0416 ಇದ್ದು, ಗ್ರಾಮೀಣ ಪ್ರದೇಶದಲ್ಲಿ 4,1436 ಮಕ್ಕಳು ಇದ್ದಾರೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುವುದು ಹಾಗೂ ವಲಸೆ ಹೋಗಿರುವ, ಬಂದಿರುವ ಕುಟುಂಬದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಕ್ರಮವಹಿಸಲಾಗಿದೆ ಎಂದರು. ತಾಲೂಕು ಆರೋಗ್ಯ ಅಧಿಕಾರಿ ಅಮರೇಶ ಪಾಟೀಲ್ ಮಾತನಾಡಿದರು.