ಬಳ್ಳಾರಿ : ರಾಜ್ಯ ರಾಜಕಾರಣದಲ್ಲಿ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಬಾರಿ ಬದಲಾವಣೆಗಳಾಗಲಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ಗುದ್ದಾಟದಿಂದ ಕಾಂಗ್ರೆಸ್ ಈಗ ಒಡೆದ ಮನೆಯಾಗಿದ್ದು, ಶೀಘ್ರದಲ್ಲೇ ಸ್ಫೋಟಗೊಳ್ಳಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ಆಸೆಯಿಂದ ಶಾಸಕರು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಆದರೆ ಶಿಸ್ತು ಕ್ರಮದ ಎಚ್ಚರಿಕೆ ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದರು.
ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ಆ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂಬ ಪತ್ರಗಳು ದೆಹಲಿ ತಲುಪಿವೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರನ್ನು ಕಡೆಗಣಿಸುತ್ತಿದೆ. ಉಚ್ಚಾಟಿತ ನಾಯಕರನ್ನು ವಾಪಸ್ ಪಡೆಯದಿದ್ದರೆ ಉತ್ತರ ಪ್ರದೇಶ ಮಾದರಿಯಲ್ಲಿ ಪಾಠ ಕಲಿಸುವುದಾಗಿ ಮುಸ್ಲಿಂ ಧಾರ್ಮಿಕ ಗುರುಗಳು ಬೆದರಿಕೆ ಹಾಕಿದ್ದರೂ ಕಾಂಗ್ರೆಸ್ ಹೈಕಮಾಂಡ್ ಮೌನವಾಗಿದೆ ಎಂದು ಟೀಕಿಸಿದರು.
ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಸಂಘಟನೆಯನ್ನು ಭಯೋತ್ಪಾದನೆಗೆ ಹೋಲಿಸಿರುವುದು ಹಾಸ್ಯಾಸ್ಪದ. ಇದಕ್ಕಾಗಿ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿಯಲ್ಲಿ ಈಗ ಹಿಂದೂತ್ವಕ್ಕೆ ಬೆಲೆಯಿಲ್ಲ, ಕೇವಲ ಕುಟುಂಬ ರಾಜಕಾರಣಕ್ಕೆ ಮನ್ನಣೆ ಸಿಗುತ್ತಿದೆ. ಪಕ್ಷ ಶುದ್ಧೀಕರಣವಾಗಬೇಕು ಎಂಬ ಉದ್ದೇಶದಿಂದಲೇ ನಾನು ಪಕ್ಷದಿಂದ ಹೊರಬಂದೆ. ಆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ನಾನು ಬೇರೆ ಯಾವುದೇ ಪಕ್ಷ ಸೇರುವುದಿಲ್ಲ ಅಥವಾ ಹೊಸ ಪಕ್ಷ ಕಟ್ಟುವುದಿಲ್ಲ. ಬಿಜೆಪಿ ಸಂಪೂರ್ಣವಾಗಿ ಶುದ್ಧೀಕರಣಗೊಂಡ ಬಳಿಕವಷ್ಟೇ ವಾಪಸ್ ಹೋಗುತ್ತೇನೆ ಎಂದರು.
ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಮಾವೇಶಕ್ಕೆ ಹೋಗುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಆಹ್ವಾನ ನೀಡಿದರೆ ಆ ಬಗ್ಗೆ ಯೋಚಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದರು.