ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು. ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಪದಾಧಿಕಾರಿಗಳಾದ ಎಚ್.ಬಿ.ಗಂಗಪ್ಪ, ದೇವದಾಸ್ ಕೆ., ಎಚ್.ಆಂಜನೇಯ, ಕೊಳಗಲ್ಲು ಮಲ್ಲಯ್ಯ, ಬಿ.ರಮೇಶ್, ಜಿ.ಪಂಪಾಪತಿ ಇದ್ದರು 
ಬಳ್ಳಾರಿ

ರೋಹಿತ್ ವೇಮುಲ ಕಾಯ್ದೆ ಜಾರಿಗೆ ಆಗ್ರಹ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಸಂಘರ್ಷ
ಬಳ್ಳಾರಿ : ರಾಜ್ಯ ಸರ್ಕಾರ ರೋಹಿತ್ ವೇಮುಲ ಕಾಯ್ದೆ ಜಾರಿಗೆ ನಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಮಾತನಾಡಿ, ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳ ಸಮಾನತೆ ಮತ್ತು ಪ್ರೋತ್ಸಾಹಕ್ಕಾಗಿ ರೂಪಿಸಿರುವ 2026ರ ಹೊಸ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇಂದಿಗೂ ಜಾತಿ ತಾರತಮ್ಯದ ಸುಳಿಗೆ ಸಿಲುಕುತ್ತಿದ್ದಾರೆ. ರೋಹಿತ್ ವೇಮುಲ, ಪಾಯಲ್ ತಡ್ವಿ ಹಾಗೂ ದರ್ಶನ್ ಸೋಲಂಕಿ ಅವರಂತಹ ಪ್ರತಿಭಾವಂತ ವಿದ್ಯಾರ್ಥಿಗಳು ಸಾಂಸ್ಥಿಕ ಹತ್ಯೆಗೆ ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಯಲು ಯುಜಿಸಿ ತಂದಿರುವ ಕಠಿಣ ನಿಯಮಾವಳಿಗಳು ಅನಿವಾರ್ಯವಾಗಿದೆ ಎಂದರು.
2026ರ ಯುಜಿಸಿ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ದುರದೃಷ್ಟಕರವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ದಲಿತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿಷ್ಯ ಶೂನ್ಯವಾಗಲಿದೆ ಎಂದು ಎಚ್ಚರಿಸಿದರು.
ಯುಜಿಸಿ ರೂಪಿಸಿರುವ 2026ರ ನಿಯಮಾವಳಿಗಳ ಮೇಲಿರುವ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ಕೂಡಲೇ ತೆರವುಗೊಳಿಸಬೇಕು. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ರಕ್ಷಣೆಗಾಗಿ ಯುಜಿಸಿ ಪ್ರತ್ಯೇಕ ಕಠಿಣ ನಿಯಮಾವಳಿಗಳನ್ನು ಜಾರಿ ಮಾಡಬೇಕು. ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ಎಸಗುವ ಅಧಿಕಾರಿಗಳು ಮತ್ತು ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
===