ಅಲ್ಲಂ ಪ್ರಶಾಂತ್ 
ಬಳ್ಳಾರಿ

ಕೇಂದ್ರ ಯುವಕರ ಜತೆ ಚೆಲ್ಲಾಟ

ಪ್ರಮುಖ ಮುಖ್ಯಾಂಶಗಳು

  • ಅಕ್ರಮ ನಡೆದಿರುವುದು ಆಘಾತಕಾರಿ
  • ಘಟನೆಯಿಂದ ತೀವ್ರ ಅನ್ಯಾಯ
ಬಳ್ಳಾರಿ : ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಲಕ್ಷಾಂತರ ಯುವಜನತೆಯ ಭವಿಷ್ಯ ಮತ್ತು ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲೇ ಇಂತಹ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಆಘಾತಕಾರಿ ಸಂಗತಿಯಾಗಿದೆ. ಹಗಲಿರುಳು ಕಷ್ಟಪಟ್ಟು ಓದಿದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಈ ಘಟನೆಯಿಂದ ತೀವ್ರ ಅನ್ಯಾಯವಾಗಿದೆ ಎಂದು ದೂರಿದರು.
ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ವೈದ್ಯರಾಗುವ ಕನಸು ಹೊತ್ತು ವರ್ಷಗಟ್ಟಲೆ ಸಿದ್ಧತೆ ನಡೆಸಿರುತ್ತಾರೆ. ಆದರೆ, ವ್ಯವಸ್ಥಿತವಾಗಿ ನಡೆಯುತ್ತಿರುವ ಪೇಪರ್ ಲೀಕ್ ಮಾಫಿಯಾದಿಂದಾಗಿ ವಿದ್ಯಾರ್ಥಿಗಳ ಶ್ರಮ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಬೇಜವಾಬ್ದಾರಿತನವೇ ನೇರ ಕಾರಣ ಎಂದು ಆರೋಪಿಸಿದರು. ಈ ಹಗರಣದ ಹಿಂದೆ ದೊಡ್ಡ ಜಾಲವೇ ಸಕ್ರಿಯವಾಗಿದ್ದು, ಇದರ ತನಿಖೆಯನ್ನು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ನಿಷ್ಪಕ್ಷಪಾತವಾಗಿ ನಡೆಸಬೇಕು. ತಪ್ಪಿತಸ್ತ ಅಧಿಕಾರಿಗಳು ಹಾಗೂ ಮಾಫಿಯಾದ ಸೂತ್ರಧಾರರನ್ನು ತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.