ಬಳ್ಳಾರಿ : ನಗರದ ಬ್ಯಾನರ್ ಗಲಭೆ ಪ್ರಕರಣ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಳ್ಳಾರಿ ವಲಯದ ಐಜಿಪಿ ಡಾ.ಹರ್ಷ ಅವರು ಬುಧವಾರ ರಾತ್ರಿ ಗಸ್ತು ನಡೆಸಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.
ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಬಳಿಕ ಮಾತನಾಡಿದರು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶಾಂತಿ ಭಂಗ ಉಂಟುಮಾಡುವ ಶಕ್ತಿಗಳ ಮೇಲೆ ನಿಗಾ ಇಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹೊರರಾಜ್ಯಗಳಿಂದ ಆಗಮಿಸುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ಇಡಲು ಜಿಲ್ಲೆಯ ಗಡಿಭಾಗಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ನಗರದ ಲಾಡ್ಜ್‌ಗಳು ಹಾಗೂ ವಸತಿ ನಿಲಯಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರು ಅಥವಾ ಸಮಾಜದ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.