ಬಳ್ಳಾರಿಯ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ನ್ಯಾಯಾಧೀಶೆ ಕೆ.ಜಿ.ಶಾಂತಿ ಉದ್ಘಾಟಿಸಿದರು. ವಕೀಲರ ಸಂಘದ ಜಿಲ್ಲಾಧ್ಯಕ್ಷ ಪಿ.ರಾಮಬ್ರಹ್ಮಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಇದ್ದರು. 
ಬಳ್ಳಾರಿ

ಸಾಕ್ಷರತೆ ಮೂಡಿಸುವುದು ಅವಶ್ಯ

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶೆ
ಬಳ್ಳಾರಿ : ಸಾರ್ವಜನಿಕರಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಮತ್ತು ಸಾಕ್ಷರತೆ ಮೂಡಿಸುವುದು ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಡೀಡ್ಸ್ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ಜಿಲ್ಲೆಯ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾನೂನು ಸೇವಾ ಪ್ರಾಧಿಕಾರ ಮತ್ತು ಕಕ್ಷಿದಾರರ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿ, ತೊಂದರೆಯಲ್ಲಿರುವವರಿಗೆ ಕಾನೂನು ನೆರವು ದೊರೆಯುವಂತೆ ಮಾಡುವುದು ತಮ್ಮ ಕರ್ತವ್ಯವಾಗಿರುತ್ತದೆ. ಇದರಿಂದ ತಾವುಗಳು ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಮಾಜದ ಹಿತದೃಷ್ಟಿಯಿಂದ ಸಮಾಜ ಸೇವೆಯಲ್ಲಿ ಪಿಎಲ್ ವಿ ಗಳ ಪಾತ್ರವೂ ಅವಶ್ಯವಿದೆ. ಈ ದಿಸೆಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕಾನೂನು ಇಲಾಖೆಗೆ ಹಾಗೂ ಸಮಾಜಕ್ಕೆ ಕಾನೂನಿನ ಅರಿವು ಹಾಗೂ ಸಲಹೆ ಕೊಡುವಲ್ಲಿ ನೆರವಾಗಬೇಕು. ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು ಎಂಬುದು ಕಾನೂನಿನ ಮೂಲ ಉದ್ದೇಶವಾಗಿದೆ. ಹಾಗಾಗಿ ಸ್ವಯಂ ಸೇವಕರು ಎರಡು ದಿನಗಳ ತರಬೇತಿಯ ಸದ್ಭಳಕೆ ಮಾಡಿಕೊಂಡು, ಅಸಹಾಯಕರಿಗೆ ಕಾನೂನು ಸೇವೆಗಳನ್ನು ತಲುಪಿಸುವಂತಹರಾಗಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕಾನೂನು ಸೇವಾ ಪ್ರಾಧಿಕಾರ ಮತ್ತು ಜನಸಾಮಾನ್ಯರ ನಡುವಿನ ಪ್ರಮುಖ ಕೊಂಡಿಯಾಗಿದ್ದಾರೆ. ಇವರು ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಕಾನೂನು ನೆರವು ಒದಗಿಸುವುದು, ಕಾನೂನು ಅರಿವು ಮೂಡಿಸುವುದು, ವಿವಾದಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಮತ್ತು ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಹಾಗಾಗಿ ಗುಣಮಟ್ಟದ ತರಬೇತಿ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅರಿವು ಕುರಿತ ವಿಡಿಯೋ ಪ್ರದರ್ಶಿಸಲಾಯಿತು.