ಬಳ್ಳಾರಿಯ ಡಿಸಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ನ್ಯಾ.ರಾಜೇಶ್ ಎನ್.ಹೊಸಮನೆ ಉದ್ಘಾಟಿಸಿದರು. ಎಡಿಸಿ ಮಹಮ್ಮದ್ ಎನ್.ಜುಬೇರ್, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷೆ ತ್ರಿವೇಣಿ ಪತ್ತಾರ್, ಎಎಸ್ಪಿ ನವೀನ್ ಕುಮಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇದ್ದರು.
ಬಳ್ಳಾರಿ : ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳಬಾರದು. ಅವರನ್ನು ಶಿಕ್ಷಣವಂತರನ್ನಾಗಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಹಯೋಗದೊಂದಿಗೆ ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀತ ಕಾರ್ಮಿಕ ಪದ್ಧತಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆ ಉಲ್ಲಂಘಿಸುವವರು ಶಿಕ್ಷೆಗೆ ಒಳಗಾಗುತ್ತಾರೆ. ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಜೀತ ಹಾಗೂ ಬಾಲಕಾರ್ಮಿಕ ಪದ್ಧತಿಗಳು ಕಂಡುಬಂದರೆ ತಕ್ಷಣವೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಗಮನಕ್ಕೆ ತಂದರೆ ಅಂತಹ ಪ್ರಕರಣಗಳನ್ನು ತಡೆಗಟ್ಟಿ ತಪ್ಪಿಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.
ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿ, ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ.
ಸಂವಿಧಾನವು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿದೆ. ಸರ್ಕಾರವು ಶಿಕ್ಷಣ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆಯಾಗಬೇಕು ಎಂದು ಹೇಳಿದರು.