ಸಂಡೂರು ತಾಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯೋಜನೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಸ್.ನೂರುದ್ದೀನ್, ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ತಹಸೀಲ್ದಾರ್ ಅನಿಲ್ ಕುಮಾರ್ ಇತರರಿದ್ದರು.
- ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಸ್.ನೂರುದ್ದೀನ್ ಸಲಹೆ
- ಸಂಡೂರು ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ
ಸಂಡೂರು: ಅಗತ್ಯ ದಾಖಲೆ ಹೊಂದಿರುವ ಎಲ್ಲರೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಸಂಪೂರ್ಣ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಸ್.ನೂರುದ್ದೀನ್ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಪಟ್ಟಣದ ತಾಪಂ ಕಚೇರಿಯಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗುರುವಾರ ಮಾತನಾಡಿದರು.
ಯುವನಿಧಿ ಯೋಜನೆಯಡಿ 2024-25ನೇ ಸಾಲಿನಲ್ಲಿ 832 ಅಭ್ಯರ್ಥಿಗಳು ನೋಂದಣಿಯಾಗಿದ್ದು, 2025-26ನೇ ಸಾಲಿನಲ್ಲಿ 624 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಕುಸಿತಕ್ಕೆ ಕಾರಣವೇನೆಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವೆಂಕಟೇಶರನ್ನು ಪ್ರಶ್ನಿಸಿ, ಮುಂದಿನ ಸಭೆಯಲ್ಲಿ ಈ ಕುರಿತು ತಾಪಂ ಇಒ ಅವರಿಗೆ ಸ್ಪಷ್ಟ ಮಾಹಿತಿ ನೀಡಬೇಕೆಂದು ಸೂಚಿಸಿದರು.
ತಾಪಂ ಇಒ ಮಡಗಿನ ಬಸಪ್ಪ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರು ಖರೀದಿಸುವ ಶಕ್ತಿಯನ್ನು ಹೆಚ್ಚಿಸಿವೆ. ಗೃಹಲಕ್ಷ್ಮಿ ಯೋಜನೆಯಡಿ ಶೇ.97 ಪ್ರಗತಿಯಾಗಿದ್ದು, ಶೇ.100 ಆಗಬೇಕು. ಶಕ್ತಿ ಯೋಜನೆಯಡಿ 1.27ಕೋಟಿ ಮಹಿಳೆಯರು, 5.26 ಲಕ್ಷ ಮಕ್ಕಳು ಪ್ರಯಾಣಿಸಿದ್ದು ಸಾರಿಗೆ ಇಲಾಖೆಗೆ ಈವರೆಗೆ 49.35ಕೋಟಿ ರೂ. ಅನುದಾನ ಸರ್ಕಾರದಿಂದ ಭರಿಸಲಾಗಿದೆ. ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಗ್ರಾಮೀಣ ಅಭ್ಯರ್ಥಿಗಳು ಬಸ್ ಸಿಗಲಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾಗಬಾರದು. ಸಂಬಂಧಿಸಿದ ಅಧಿಕಾರಿಗಳು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ತಹಸೀಲ್ದಾರ್ ಅನಿಲ್ ಕುಮಾರ್ ಇತರರಿದ್ದರು.