- ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮ
- ಜೂ.19 ರಂದು ಯೋಗಾಜಾಥಾ
ಬಳ್ಳಾರಿ : ಜಿಲ್ಲಾಡಳಿತದಿಂದ ಜೂ.21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಅಂದು ಇಲ್ಲಿನ ಶೆಟ್ರ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಚರಿಸಲು ನಿರ್ಧಾರಿಸಲಾಗಿದೆ.
ಬೆಳಗ್ಗೆ 07 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಯೋಗಾಸನ ಮಾಡಲು ನಿರ್ದೇಶನ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಆಗಮಿಸಬಹುದಾಗಿದೆ. ಪತಂಜಲಿ ಯೋಗ ಕೇಂದ್ರ, ಆರ್ಟ್ ಆಫ್ ಲಿವಿಂಗ್ ಸೇರಿದಂತೆ ನಾನಾ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು.
ಶಾಲಾ-ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಭಾಗವಹಿಸುವವರಿಗೆ ಲಘು ಉಪಹಾರ, ಕುಡಿವ ನೀರು, ಹಸಿರು ಹೊದಿಕೆ, ಸೂಕ್ತ ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಮಾಡಿಕೊಳ್ಳಬೇಕು. ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಬೇಕು. ಪಾರ್ಕಿಂಗ್ ಹಾಗೂ ಅಂಬ್ಯುಲೆನ್ಸ್ ವವ್ಯಸ್ಥೆ ಮಾಡಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೇಂದರ್ ಮಾತನಾಡಿ, ಈ ಬಾರಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ಜೂ.19 ರಂದು ಯೋಗಾಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.