ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. ಡಿಸಿ ನಾಗೇಂದ್ರ ಪ್ರಸಾದ್ ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಎಡಿಸಿ ಮಹಮ್ಮದ್ ಎನ್.ಜುಬೇರ್ ಇದ್ದರು. 
ಬಳ್ಳಾರಿ

ವ್ಯಾಪಕ ಪ್ರಚಾರದಿಂದ ಜಾಗೃತಿ ಮೂಡಿಸಿ

ಪ್ರಮುಖ ಮುಖ್ಯಾಂಶಗಳು

  • ಕಾರ್ಯಪಡೆಯ ಸಮಿತಿ ಸಭೆ
  • ವಸತಿ ಸೌಲಭ್ಯ ಕಲ್ಪಿಸಬೇಕು
ಬಳ್ಳಾರಿ : ಜಿಲ್ಲೆಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾರ್ಯಪಡೆಯು ನಿಯಮಿತ ಕೆಲಸಗಳ ಜತೆಗೆ, ಬಾಲಕಾರ್ಮಿಕ ವ್ಯವಸ್ಥೆಯ ವಿರುದ್ಧ ವ್ಯಾಪಕ ಜನಜಾಗೃತಿ ಮೂಡಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಟಾಸ್ಕ್ ಫೋರ್ಸ್ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೆಸೆಯಲು ನಿರಂತರ ಹಠಾತ್ ದಾಳಿ ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬಾಲಕಾರ್ಮಿಕತೆಯಿಂದ ಮುಕ್ತಗೊಂಡು ಸರ್ಕಾರಿ ಶಾಲೆಗೆ ದಾಖಲಾದ ಬಡ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಎಸ್‌ಸಿ, ಎಸ್‌ಟಿ ಹಾಗೂ ಬಿಸಿಎಂ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲಿ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್.ಎ ಮಾತನಾಡಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ನಿರ್ದೇಶನದಂತೆ ಕಳೆದ ಒಂದು ವರ್ಷದಲ್ಲಿ 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದೆ. ಒಟ್ಟು 58 ಬಾಲಕಾರ್ಮಿಕರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮತ್ತು ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುತ್ತಿದ್ದ ಮಾಲೀಕರ ವಿರುದ್ಧ ನಾನಾ ಪೊಲೀಸ್ ಠಾಣೆಗಳಲ್ಲಿ 31 ಪ್ರಕರಣ ದಾಖಲಿಸಲಾಗಿದ್ದು, ಕರಪತ್ರಗಳ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮಗಳಿಗಾಗಿ ಪ್ರಸಿದ್ಧ ಕಂಪನಿಗಳಿಂದ ಸಿಎಸ್‌ಆರ್ ಅನುದಾನ ಮತ್ತು ಗಣ್ಯ ವ್ಯಕ್ತಿಗಳಿಂದ ದೇಣಿಗೆ ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
===