ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ., ಮಾತನಾಡಿದರು. ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಬ್ದುಲ್ ರೆಹಮಾನ್ ಇದ್ದರು. 
ಬಳ್ಳಾರಿ

ಆರ್‌ಓ ಘಟಕಗಳು ದುರಸ್ತಿಗೊಳಿಸಿ

ಪ್ರಮುಖ ಮುಖ್ಯಾಂಶಗಳು

  • ಸಭೆ
ಬಳ್ಳಾರಿ : ಜಿಲ್ಲೆಯಲ್ಲಿ ಆರ್‌ಓ ಘಟಕಗಳ ನಿರ್ವಹಣೆಗೆ ಕ್ರಮವಹಿಸಬೇಕು. ಕುಡಿವ ನೀರು ಕಲುಷಿತಗೊಳ್ಳದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ., ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿವ ನೀರು ಸಮಸ್ಯೆಯಾದಲ್ಲಿ ನೀರಿನ ಟ್ಯಾಂಕರ್ ಇರಿಸಿಕೊಳ್ಳಬೇಕು. ಮುಖ್ಯವಾಗಿ ಟ್ಯಾಂಕರ್ ಗಳ ಸ್ಥಿತಿ ಪರಿಶೀಲಿಸಬೇಕು. ತುಂಗಭದ್ರ ನದಿ ಹಾಗೂ ಕಾಲುವೆ ತೀರದಲ್ಲಿಯೇ ಇದ್ದರೂ, ಕಂಪ್ಲಿ ಭಾಗದ ಸಣಾಪುರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಕುಡಿವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಪಂಪಿಂಗ್ ಸಮಸ್ಯೆ, ಪೈಪ್‌ಲೈನ್ ಸೇರಿದಂತೆ ಇತರೆ ಕಾಮಗಾರಿಗಳಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು..
ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ನಡುವೆ ಸಮನ್ವಯದ ಕೊರತೆ ಇರುವುದು ಎದ್ದು ಕಾಣುತ್ತಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಸಾಕಷ್ಟು ಸಿಬ್ಬಂದಿ ಮತ್ತು ಹಣದ ಲಭ್ಯತೆ ಇದ್ದರೂ ಕೆಲಸಗಳು ನಡೆಯುತ್ತಿಲ್ಲ. ಅಗತ್ಯವಿದ್ದರೆ ಹೆಚ್ಚುವರಿ ಪಂಪ್‌ಗಳನ್ನು ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದರು.
ಕುಡಿವ ನೀರಿನ ಸಮಸ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ. ಹೀಗಾಗಿ ನೀರಿನ ಅಭಾವ ತಲೆದೋರುವ ಸಂಭವವಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಜಾನುವಾರುಗಳಿಗೆ ಯಾವುದೇ ರೀತಿಯ ಮೇವಿನ ಸಮಸ್ಯೆಯಿಲ್ಲ. ಆದರೂ ಸಹ ಉಲ್ಬಣಗೊಳ್ಳದಂತೆ ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅಲೆಗಳ ಪ್ರಖರತೆ ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಬೇಕು. ಮುಂಗಾರು ಪೂರ್ವ ಮಳೆ ಆರಂಭಗೊಳ್ಳಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಡಿಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
===