ಬಳ್ಳಾರಿಯ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದರು.
ಬಳ್ಳಾರಿ : ಜಿಲ್ಲಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ಸುಗಮ ಹಾಗೂ ವ್ಯವಸ್ಥಿತ ಆರಂಭಗೊಂಡಿತು. ಪರೀಕ್ಷೆಯ ಮೊದಲ ದಿನವಾದ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು ಕಂಡುಬಂತು.
ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಒಟ್ಟು 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು. ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ ಒಟ್ಟು 21,473 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 21,137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 336 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೆಲ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕರು ಹೂವು ನೀಡಿ, ಸಿಹಿ ಹಂಚಿ ಪರೀಕ್ಷಾ ಭಯ ಹೋಗಲಾಡಿಸುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು, ವೆಬ್‌ಕಾಸ್ಟಿಂಗ್ ಪ್ರಕ್ರಿಯೆ ಹಾಗೂ ನಿರಂತರ ಇಂಟನೆಟ್ ವ್ಯವಸ್ಥೆ ಮಾಡಲಾಗಿತ್ತು. ಬೇಸಿಗೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕುಡಿವ ನೀರು ಹಾಗೂ ಆಸನಗಳ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು. ಒಟ್ಟಾರೆಯಾಗಿ ಮೊದಲ ದಿನದ ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿ ನಡೆಯಿತು.