ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಶಾಸಕ ನಾರಾ ಭರತರೆಡ್ಡಿ ಉದ್ಘಾಟಿಸಿದರು. ಮೇಯರ್ ಪಿ.ಗಾದೆಪ್ಪ, ಎಡಿಸಿ ಮಹಮ್ಮದ್ ಎನ್. ಜುಬೇರ್, ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇತರರಿದ್ದರು. 
ಬಳ್ಳಾರಿ

ಸರ್ಕಾರ ಬಸವ ತತ್ವ ಮೇಲೆ ನಡೆಯುತ್ತಿದೆ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರ
ಬಳ್ಳಾರಿ : ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಸವ ತತ್ವದ ಮೇಲೆ ನಡೆಯುತ್ತಿದ್ದು, ಈಗಾಗಲೇ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸೋಮವಾರ ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವಣ್ಣ ಅವರ ದಾಸೋಹ ತತ್ವದಿಂದ ಪ್ರೇರಿತರಾಗಿ ಸಿಎಂ ಸಿದ್ದರಾಮಯ್ಯ ಅವರು 2013ರಲ್ಲೇ ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ನಗರದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಶ್ವರೂಢ ಬಸವಣ್ಣನ ಪ್ರತಿಮೆ ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು. ಕೆಲವು ತಾಂತ್ರಿಕ ಕಾರಣಗಳಿಂದ ಪ್ರತಿಮೆ ಉದ್ಘಾಟನೆ ವಿಳಂಬವಾಗಿದೆ. ಇನ್ನೂ ಆರು ತಿಂಗಳೊಳಗೆ ಸ್ವಂತ ಖರ್ಚಿನಲ್ಲಿ ಭವ್ಯ ಅಶ್ವರೂಢ ಬಸವಣ್ಣನ ಪ್ರತಿಮೆ ನಿರ್ಮಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.
ಮೇಯರ್ ಪಿ.ಗಾದೆಪ್ಪ ಮಾತನಾಡಿ, ಬಸವಣ್ಣ ಅವರು ಜಾತಿ-ಮತಗಳ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಲು ಅನುಭವ ಮಂಟಪ ಎಂಬ ಸಂಸತ್ ಸ್ಥಾಪಿಸಿದರು. ಅವರ ವಚನ ಸಾಹಿತ್ಯವು ಇಂದಿಗೂ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂದಿನ ಕಾಲದಲ್ಲಿ ಸುಮಾರು ಅನೇಕ ಶರಣರನ್ನು ಒಗ್ಗೂಡಿಸಿ, ಸಮಾಜದ ಏಳಿಗೆಗಾಗಿ ಅವರು ಹಾಕಿಕೊಟ್ಟ ದಾರಿ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದರು.
ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಮಾತನಾಡಿ, ಬಸವಣ್ಣ ಅವರ ವಚನಗಳು ಕೇವಲ ನಾಲ್ಕು ಸಾಲುಗಳಿದ್ದರೂ, ಅವುಗಳಲ್ಲಿ ಬದುಕಿನ ಸತ್ಯ, ಪ್ರಾಮಾಣಿಕತೆ ಮತ್ತು ಜನರ ನಡುವಿನ ನಡವಳಿಕೆಯ ಬಗ್ಗೆ ಆಳವಾದ ಅರ್ಥವಿದೆ. ಬಸವಣ್ಣನವರ ತತ್ವದಂತೆ ನಮ್ಮ ದೇಹ ಮತ್ತು ಮನಸ್ಸನ್ನೇ ದೇಗುಲವಾಗಿಸಿಕೊಳ್ಳಬೇಕು. ಶ್ರದ್ಧೆಯಿಂದ ಕೆಲಸ ಮಾಡುವುದೇ ನಿಜವಾದ ಭಕ್ತಿ ಎಂದರು.
ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ವ್ಯಕ್ತಿಗಳನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುನ್ನ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಜಯಂತಿ ಅಂಗವಾಗಿ ನಗರದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಸಾಗಿಬಂದಿತು.