ಜಿಲ್ಲೆ

ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಸೊಗಸು ಅರಿವು: ಕೆ.ಸುಬ್ರಹ್ಮಣ್ಯ ಭಟ್ ಅಭಿಪ್ರಾಯ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಗ್ರಾಮಾಂತರ ಪ್ರದೇಶದಲ್ಲಿ ಎನ್ನೆಸ್ಸೆಸ್ ಶಿಬಿರ ಆಯೋಜಿಸುವುದರಿಂದ ನಗರ ಪ್ರದೇಶದ ವಿದ್ಯಾರ್ಥಿಗಳು ಗ್ರಾಮೀಣ ಬದುಕಿನ ಸೊಗಸು ಅರಿತುಕೊಳ್ಳಬಹುದು ಎಂದು ಶಾಲೆಯ ಸಂಚಾಲಕ ಕೆ.ಸುಬ್ರಹ್ಮಣ್ಯ ಭಟ್ ಹೇಳಿದರು.

ಉಳ್ಳಾಲ ತಾಲೂಕು ಮುಡಿಪು ಶ್ರೀ ಭಾರತೀ ಅನುದಾನಿತ ಶಾಲೆಯಲ್ಲಿ ಇತ್ತೀಚೆಗೆ ಮಂಗಳೂರು ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತೀ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಲ್ ಜಿ.ಶೆಟ್ಟಿ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಜತೆಗೆ ಹೆತ್ತವರು ಗುರು- ಹಿರಿಯರು, ದೇಶ ಮತ್ತು ಸಮಾಜವನ್ನು ಪ್ರೀತಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.

ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಕೆ. ಮಾತನಾಡಿದರು. ಬಲ್ಮಠ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಭಾರತೀ ಶಾಲೆ ಹಳೇ ವಿದ್ಯಾರ್ಥಿ ಪೂವಪ್ಪ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಘಟಕ ನಾಯಕಿಯರಾದ ರಶ್ಮಿತಾ, ಅಕ್ಷತಾ ಲಮಾಣಿ ಉಪಸ್ಥಿತರಿದ್ದರು. ಉಪನ್ಯಾಸಕ ಉಮೇಶ್ ಕೆ.ಆರ್. ಸ್ವಾಗತಿಸಿದರು. ಸಹ ಶಿಬಿರಾಧಿಕಾರಿ ಸಂತೋಷ ಸಿ. ನಿರೂಪಿಸಿದರು. ಶಿಬಿರಾಧಿಕಾರಿ ಚೇತನಾ ವಂದಿಸಿದರು.