ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಸರ್ಕಾರ ನೀಡಲು ಉದ್ದೇಶಿಸಿರುವ ಅಂತರಾಷ್ಟ್ರೀಯ ಪ್ರಶಸ್ತಿಗೆ ‘ಬೆಂಗಳೂರು ಸೈನ್ಸ್ ಫೋರಂ’ ಆಯ್ಕೆಯಾಗಿದೆ.
ಜೂ.14ರಂದು ಸರ್ಕಾರ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದ್ದು, ಆಯ್ಕೆ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆ ಮತ್ತು ವ್ಯಕ್ತಿಗಳನ್ನು ಗುರುತಿಸಿ ಬೆಂಗಳೂರು ಸೈನ್ಸ್ ಫೋರಂನ್ನು ಆಯ್ಕೆ ಮಾಡಿದೆ.
ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಅಧೀನದಲ್ಲಿರುವ ಬೆಂಗಳೂರು ಸೈನ್ಸ್ ಫೋರಂ ಸಂಸ್ಥೆಯು ಮಾಡಿದ ಅಪ್ರತಿಮ ಸಾಧನೆಯನ್ನು ಪರಿಗಣಿಸಿ ಕರ್ನಾಟಕಕ್ಕೆ ಕೀರ್ತಿ ತಂದಿದಕ್ಕಾಗಿ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಗುರುವಾರ ಬೆಳಗ್ಗೆ 10 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ 515ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.