ಜಿಲ್ಲೆ

ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದೇನೆ…ನೀವ್ಯಾರು ಆಸ್ಪತ್ರೆಗೆ ಬರಬೇಡಿ: ಬೊಮ್ಮಾಯಿ

ಬೆಂಗಳೂರು: ಮೊಣಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೊಮ್ಮಾಯಿ ಅವರೇ ತಮ್ಮ ಆರೋಗ್ಯದ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಟ್ವೀಟ್​​ನಲ್ಲಿ ಏನಿದೆ?: ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ.ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ.

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಟ್ವೀಟ್​​ ಮಾಡಿದ್ದಾರೆ.

ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.