ಜಿಲ್ಲೆ

ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ: ಅ.12ಕ್ಕೆ ಮುಂದಿನ ವಿಚಾರಣೆ

manjunathktgns

ಬೆಂಗಳೂರು: ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಿಸಿ ಹೊರಡಿಸಿದ ಆದೇಶ ಪ್ರಶ್ನಿಸಿ ಹಾಗೂ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಾಜಿ ಕಾರ್ಪೋರೇಟರ್ ಎಂ. ಶಿವರಾಜ್ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಬಿಬಿಎಂಪಿ ಚುನಾವಣೆ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಅ.12ಕ್ಕೆ ವಿಚಾರಣೆ ಮುಂದೂಡಿತು.

ಪಾಲಿಕೆಯ ಚುನಾಯಿತ ಸದಸ್ಯರ ಅವಧಿ ಸೆ.10ಕ್ಕೆ ಪೂರ್ಣಗೊಂಡಿದ್ದು, ಅದಕ್ಕೂ ಮುನ್ನ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಕರೊನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾಲಿಕೆಯಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇರಬೇಕಿತ್ತು. ಆದರೆ, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಆರೋಪಿಸಿರುವ ಅರ್ಜಿದಾರರು, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.