ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹಿಂದೆ ಕಾರ್ಯನಿರ್ವಹಿಸಿದ್ದ ಕಾಮಗಾರಿಗಳಿಗೆ 1,500 ಕೋಟಿ ರೂ.ಹಣ ಬಿಡುಗಡೆ ಸೇರಿ ಇತರ ಸಮಸ್ಯೆಗಳನ್ನು ಬಗೆಹರಿಸುವಂತೆ ಕೋರಿ ಬಿಬಿಎಂಪಿ ಗುತ್ತಿಗೆದಾರರ ಸಂಘ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದೆ.
ಸಂಘದ ಅಧ್ಯಕ್ಷ ಜಿ.ಎಂ.ನಂದಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು, ಕೆಆರ್‌ಐಡಿಎಲ್ ವತಿಯಿಂದ ನಿರ್ವಹಿಸಲಾಗಿದ್ದ ಕಾಮಗಾರಿಗಳಿಗೆ ಶೇ.25 ತಡೆಹಿಡಿದಿರುವ ಬಿಲ್ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು.ಬಿಬಿಎಂಪಿ ಕಾಮಗಾರಿಗಳಿಗೆ ಸಂಬಂಧಿಸಿದ ತನಿಖಾ ವರದಿಯನ್ನು ಸರ್ಕಾರಕ್ಕೆ ಈಗಾಗಲೇ ಸಲ್ಲಿಸಿರುವ ಕಾರಣ, ಬಿಲ್‌ಗಳು ಪಾವತಿ ಸಮಯದಲ್ಲಿ ಪಡೆಯಲಾಗಿರುವ ಶೇ.10 ಭದ್ರತಾ ಠೇವಣಿಯನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಬೇಕೆಂದು ಡಿಕೆಶಿ ಗಮನಕ್ಕೆ ತಂದರು.
ಬಾಕಿ ಕಾಮಗಾರಿಗಳ ಬಿಲ್‌ಗಳಿಗೆ ಹಣ ಬಿಡುಗಡೆ ಸೇರಿ ಮೇಲಿನ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಡಿಕೆಶಿ, ಗುತ್ತಿಗೆದಾರರಿಗೆ ಆಶ್ವಾಸನೆ ನೀಡಿದರು.
ನಂದಕುಮಾರ್ ಮಾತನಾಡಿ, ನಮ್ಮ ಬೇಡಿಕೆಗಳ ಬಗ್ಗೆ ಡಿಕೆಶಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾಮಗಾರಿಗಳ ಬಾಕಿ ಬಿಲ್‌ಗಳಿಗೆ ಹಣ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದರು.
ಆಡಳಿತ, ಅಭಿವೃದ್ಧಿ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ), ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ವನ್ನಾಗಿ( ಜಿಬಿಎ) ರಚನೆ ಮಾಡಿರುವ ಹಿನ್ನೆಲೆಯಲ್ಲಿ ಡಿಸಿಎಂ ಅವರಿಗೆ ಗುತ್ತಿಗೆದಾರರು ಕೃತಜ್ಞತೆ ಸಲ್ಲಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್ ಮತ್ತಿತರರಿದ್ದರು.