ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ವಾಣಿಜ್ಯ ಮಳಿಗೆಗಳಲ್ಲಿ ಫೆ.28 ರೊಳಗಾಗಿ ಶೇ.60 ಪ್ರಮಾಣದಲ್ಲಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲ ರೀತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಭಾನುವಾರ ಮಲ್ಲೇಶ್ವರದ ಐಪಿಪಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಅವರು ಈ ಗಡುವನ್ನು ಪ್ರಕಟಿಸಿದರು.
ನಗರದಲ್ಲಿರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ಮಾಲ್ ಸೇರಿ ಇನ್ನಿತರ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕಿದೆ. ಈ ಸಂಬಂಧ ಎಲ್ಲ ಎಂಟೂ ವಲಯಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ನಿಯಮ ಧಿಕ್ಕರಿಸಿದರೆ ನೋಟಿಸ್:
ನಗರದಲ್ಲಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು ಸೇರಿ ಒಟ್ಟು 1,400 ಕಿ.ಮೀ. ಉದ್ದವಿದೆ. ಈ ರಸ್ತೆಗಳಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುವುದು. ಆ ಬಳಿಕವೂ ನಾಮಫಲಕಗಳಲ್ಲಿ ಶೇ.60 ಭಾಗದಷ್ಟು ಕನ್ನಡ ಭಾಷೆಯನ್ನು ಬಳಸದ ಮಳಿಗೆಗಳಿಗೆ ನೋಟೀಸ್ ನೀಡಲಾಗುವುದು. ನೋಟೀಸ್ ನೀಡಿದ ಬಳಿಕ ಫೆ.28ರವರೆಗೆ ಸಮಯಾವಕಾಶ ನೀಡಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗುವುದು ಎಂದರು.
ಅಧಿಕಾರಿಗಳ ಮೇಲೂ ಶಿಸ್ತುಕ್ರಮದ ಎಚ್ಚರಿಕೆ:
ಗಡುವಿನೊಗೆ ಕನ್ನಡ ನಾಮಫಲಕಗಳನ್ನು ಅಳವಡಿಕೊಳ್ಳದ ಅಂಗಡಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅದರಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು, ನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಜತೆಗೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೂ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯ ಆಯುಕ್ತರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಪಾಲಿಕೆ ಉಪ ಆಯುಕ್ತ ಮಂಜುನಾಥ ಸ್ವಾಮಿ, ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಾಲ್ ಒಳಗಿರುವ ಮಳಿಗೆಗಳಿಗೂ ನಿಯಮ ಅನ್ವಯ:
ನಗರ ವ್ಯಾಪ್ತಿಯೊಳಗೆ ಬರುವ ದೊಡ್ಡ ದೊಡ್ಡ ಮಾಲ್ಗಳಲ್ಲಿರುವ ಮಳಿಗೆಗಳ ನಾಮಲಕಗಳಲ್ಲಿ ಕನ್ನಡ ಬಳಕೆ ಮಾಡಬೇಕಿದೆ. ಈ ಸಂಬಂಧ ಕೂಡಲೇ ಸಮಾಲೋಚನೆ ನಡೆಸಿ 15-20 ದಿನಗಳೊಳಗಾಗಿ ಮಾಲ್ ಒಳಗಿರುವ ಎಲ್ಲ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗುವುದು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತುಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಲಿದೆ.
ನಗರದಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಬಿಬಿಎಂಪಿಯ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪಾಲಿಕೆ ಬದ್ಧವಾಗಿದೆ.
- ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ