ಶಿರಾ : ಚಿಕ್ಕನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ. ಚಿಕ್ಕನಹಳ್ಳಿಯಲ್ಲಿ ಉಗ್ರೇಗೌಡ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತ ಮಕ್ಕಳ ಅನುಕೂಲಕ್ಕಾಗಿ ಚಿಕ್ಕನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ ಮಾಡಲು ಸಿಎಂಗೆ ಶೀಘ್ರವೇ ಪ್ರಸ್ತಾವನೆ ಸಲ್ಲಿಸುಸುವುದಾಗಿ ತಿಳಿಸಿದರು.
ರೈತರಿಗೆ ಆಧುನಿಕ ತಂತ್ರಜ್ಞಾನ ಅನುಸರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ತರಬೇತಿ ನೀಡಲಾಗುವುದು. ರೈತರು ತರಬೇತಿ ಕೇಂದ್ರದ ಸದುಪಯೋಗ ಪಡೆದು ಕೃಷಿಯಲ್ಲಿ ಹೆಚ್ಚಿನ ಆದಾಯ ಗಳಿಸಬೇಕು. ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ವರ್ಗದ ಕೃಷಿಕ ಮಕ್ಕಳ ಪಿಯುಸಿ ತರಗತಿಯಿಂದ ಪದವಿ, ವೃತ್ತಿಪರ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯಡಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.
3 ಲಕ್ಷ ರೈತರಿಗೆ ಕಿಸಾನ್ ಸನ್ಮಾನ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 3,01,694 ಫಲಾನುಭವಿಗಳಿಗೆ 11,841.58 ಲಕ್ಷ ರೂಪಾಯಿಯನ್ನು ರೈತರ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆಯಲ್ಲದೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಕಾರ್ಯಕ್ರಮದಡಿ 2 ಹೆಕ್ಟೇರ್ ಜಮೀನು ಹೊಂದಿರುವ ರೈತರಿಗೆ ಸೂಕ್ಷ್ಮ ನೀರಾವಾರಿ ಘಟಕಗಳನ್ನು ಅಳವಡಿಸಿಕೊಳ್ಳಲು ಶೇ. 90 ಸಹಾಯಧನಕ್ಕಾಗಿ 12.90 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಕೃಷಿ ಯಾಂತ್ರೀಕರಣ ಯೋಜನೆಯಡಿ 2618 ಫಲಾನುಭವಿಗಳಿಗೆ 9.13 ಕೋಟಿ ರೂ. ವೆಚ್ಚದ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಿರ್ಮಾಣಕ್ಕೆ ಜಮೀನು ದೇಣಿಗೆ ನೀಡುವ ಮೂಲಕ ಉಗ್ರೇಗೌಡರು ನಾವೆಲ್ಲರೂ ಸ್ಮರಿಸುವಂತಹ ಕೆಲಸ ಮಾಡಿ ಹೋಗಿದ್ದಾರೆ. ಅವರು ಮರಣ ಹೊಂದಿ 110 ವರ್ಷಗಳು ಕಳೆದಿದ್ದರೂ ರೈತರ ಮನಸ್ಸಿನಲ್ಲಿ ಜೀವಂತವಾಗಿದ್ದಾರೆ. ಅವರ ಹೆಸರು ಸ್ಮರಣೀಯವಾಗಿಸಲು ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ ಎಂದರು.
ಉಗ್ರೇಗೌಡರ ಹೆಸರಿನಲ್ಲಿ ಕೃಷಿ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಮನಸ್ಸು ಮಾಡಬೇಕು. ಇದರಿಂದ ಜಿಲ್ಲೆ ಹಾಗೂ ಇತರ ಜಿಲ್ಲೆಯ ಕೃಷಿ ಆಸಕ್ತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ ಗೌಡ ತಿಳಿಸಿದರು.
ರಾಜ್ಯ ತೆಂಗಿನ ನಾರು ಅಭಿವೃದ್ಧಿ ನಿಗಮದ ಬಿ.ಕೆ. ಮಂಜುನಾಥ್, ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನ, ತಹಸೀಲ್ದಾರ್ ಮಮತ, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎನ್.ಸಿ.ಮಂಜುನಾಥ್, ಚಿಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷೆ ಸರೋಜಮ್ಮ, ಕೃಷಿ ಇಲಾಖೆಯ ದೀಪಶ್ರೀ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ಬಿಸಿಯೂಟಕ್ಕೆ ಸಿರಿಧಾನ್ಯ : ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಾಗೂ ವಸತಿಶಾಲೆಗಳಲ್ಲಿ ಆಹಾರ ತಯಾರಿಕೆಯಲ್ಲಿ ಸಿರಿಧಾನ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಮಾಡಿದ್ದೇನೆ. ಹಾಗಾಗಿ, ಸಿರಿಧಾನ್ಯ ಬೆಳೆಯುವ ರೈತರು ಆರ್ಥಿಕವಾಗಿ ಸದೃಢರಾಗಲು ನೆರವಾಗಬಹುದು ಎಂದು ಬಿ.ಸಿ.ಪಾಟೀಲ್ ತಿಳಿಸಿದರು.