ವಿಜಯವಾಣಿ ಸುದ್ದಿಜಾಲ ಬೆಳಗಾವಿ
ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಎಚ್ಚರಿಕೆಯನ್ನು ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾನ್ಯತೆ ಪಡೆದ ಹಾಗೂ ನೋಂದಾಯಿತ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚುನಾವಣಾ ಆಯೋಗ ನೀಡಿರುವ ಕೆಲವೊಂದು ನಿರ್ದೇಶನಗಳನ್ನು ಎಲ್ಲ ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು.ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಆಮಿಷಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ. ಆ ಪ್ರಕಾರ ಜಿಲ್ಲೆಯಾದ್ಯಂತ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಯಾವುದೇ ಉಗ್ರಾಣಗಳಲ್ಲಿ ಕುಕ್ಕರ್, ಸೀರೆ, ಗೃಹಬಳಕೆಯ ವಸ್ತುಗಳ ಅಕ್ರಮ ದಾಸ್ತಾನು ಕಂಡುಬಂದರೆ ಅಂತಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು.ಜಿಲ್ಲೆಯಲ್ಲಿ ಮದ್ಯ ಸಾಗಾಣಿಕೆ ನಿಯಂತ್ರಣಕ್ಕೆ ಈಗಾಗಲೇ 21 ಚೆಕ್ ಪೋಸ್ಟ್ ಆರಂಭಿಸಲಾಗಿದೆ. ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.