bjp 
ಬೆಳಗಾವಿ

ಬೆಳಗಾವಿ ಬಿಜೆಪಿ ನಾಯಕರ ಒಗ್ಗಟ್ಟು ಪ್ರದರ್ಶನ

ಬೆಳಗಾವಿ: ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಂಘಟನಾತ್ಮಕ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
ಮಂಗಳವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ಆಗಮಿಸಿದ್ದ ಸಂತೋಷ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರೊಂದಿಗೆ ಪಕ್ಷ ಸಂಘಟನೆ, ರಾಜ್ಯ, ರಾಷ್ಟ್ರೀಯ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಭವಿಷ್ಯದ ದಿನಗಳಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದ ರಾಜಕೀಯ ವಲಯದಲ್ಲಿ ಕ್ಷೀಪ್ರ ಬೆಳವಣಿಗೆಗಳು ನಡೆಯಲಿವೆ. ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ತಳಮಟ್ಟದಿಂದಲೇ ಪಕ್ಷ ಸಂಘಟನೆ ಬಲಿಷ್ಠಗೊಳಿಸುವುದು ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗಾಗಿ ಬೆಳಗಾವಿ ಜಿಲ್ಲೆಗೆ ಬರುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯಸಭೆ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ್, ಮಹೇಶ ಟೆಂಗಿನಕಾಯಿ, ಶಶಿಕಲಾ ಜೋಲ್ಲೆ, ನಿಖಿಲ್ ಕತ್ತಿ, ದುರ್ಯೋಧನ ಐಹೊಳೆ, ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಜಗದೀಶ ಮೆಟಗುಡ್ಡ, ಡಾ.ವಿ.ಐ.ಪಾಟೀಲ, ಮಹಾದೇವಪ್ಪ ಯಾದವಾಡ, ವಕ್ತಾರ ಎಂ.ಬಿ.ಝಿರಲಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಇತರರಿದ್ದರು.