ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು, ಶಾಸಕ ಅಭಯ ಪಾಟೀಲ, ಪ್ರೀತಿ ಕಾಮಕರ, ಉಪಮೇಯರ ಹನುಮಂತ ಕೊಂಗಾಲಿ, ಲಕ್ಷ್ಮಣರಾವ ಚಿಂಗಳೆ ಇತರರಿದ್ದರು.
ಬೆಳಗಾವಿ :ಮಹಾನಗರದಲ್ಲಿ ಅಗತ್ಯವಿರುವ ಪ್ರದೇಶಗಳಲ್ಲಿ ತುರ್ತಾಗಿ ಸಾರ್ವಜನಿಕ ಶೌಚಗೃಹಗಳ ನಿರ್ಮಿಸಬೇಕು. ಜತೆಗೆ ಹಳೆಯ ಶೌಚಗೃಹ ನಿರ್ವಹಣೆ ಸುಧಾರಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆ ಮನೆಗೆ ತ್ಯಾಜ್ಯ ಸಂಗ್ರಹಣೆ, ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ ವೈಜ್ಞಾನಿಕ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಸ ವಿಲೇವಾರಿ ನಿರ್ಲಕ್ಷೃ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಖಾತಾ ವ್ಯವಸ್ಥೆಯಲ್ಲಿ ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣವೇ ಅವುಗಳನ್ನು ಪರಿಹರಿಸಿ, ಸಾರ್ವಜನಿಕರಿಗೆ ವಿಳಂಬವಿಲ್ಲದೆ ಇ-ಖಾತಾ ಸೇವೆ ಒದಗಿಸಬೇಕು. ಇಂದಿರಾ ಕ್ಯಾಂಟೀನ್ 2.0 ಯೋಜನೆಯಡಿ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಗಾಗಿ ಅಗೆದಿರುವ ರಸ್ತೆಗಳನ್ನು ಎಲ್‌ಎನ್‌ಟಿ ಗುತ್ತಿಗೆ ಸಂಸ್ಥೆಯೇ ದುರಸ್ತಿಮಾಡಬೇಕು. ಕಾಮಗಾರಿಯಿಂದ ಸಾರ್ವಜನಿಕರ ಸಂಚಾರಕ್ಕೆ ಕಿರಿಕಿರಿ ಆಗದಂತೆ ಕ್ರಮ ವಹಿಸಬೇಕು ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಅನುಮೋದನೆಗೊಂಡಂತಹ ಕಾಮಗಾರಿಗಳು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಪಡಿಸಲಾದ ನಿವೇಶನಗಳಲ್ಲಿ ಲಭ್ಯವಿರುವ ಮೂಲೆ ಹಾಗೂ ಬಿಡಿ ನಿವೇಶಗಳನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದ ಕಚೇರಿಯಲ್ಲಿನ ಕಡತಗಳನ್ನು ಕಡ್ಡಾಯವಾಗಿ ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸಬೇಕು ಎಂದು ತಿಳಿಸಿದರು.
ಶಾಸಕ ಅಭಯ ಪಾಟೀಲ ಅವರು ಮಾತನಾಡಿ, ದಕ್ಷಿಣ ಕ್ಷೇತ್ರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವು ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಆದರೆ ಪ್ರಗತಿ ವರದಿಯಲ್ಲಿ ಪೂರ್ಣಗೊಂಡಿವೆ ಎಂದು ದಾಖಲಿಸಿರುವುದು ಸರಿಯಲ್ಲ.ಸ್ಥಳೀಯ ಶಾಸಕರ ಗಮನಕ್ಕೆ ತರದೆ ಅಧಿಕಾರಿಗಳು ಏಕಪಕ್ಷೀಯವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದು ಸೂಕ್ತವಲ್ಲ. ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ ಗುಣಮಟ್ಟದಿಂದ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದರು.
ಮಹಾನಗರ ಪಾಲಿಕೆ ಮಹಾ ಪೌರರಾದ ಪ್ರೀತಿ ಕಾಮಕರ, ಉಪ ಮಹಾಪೌರ ಹನುಮಂತ ಕೊಂಗಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧಕ್ಷ ಲಕ್ಷಣರಾವ್ ಚಿಂಗಳೆ, ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಕವಿತಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಿದ್ದು ಹುಲ್ಲೊಳ್ಳಿ ಇತರರಿದ್ದರು.