ರಾಜ್ಯದಲ್ಲಿ ಬರ ಭೀಕರ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ರೈತರ ಹಿತದೃಷ್ಟಿಯಿಂದ ಅಗತ್ಯವಿರುವ ಕಡೆ ಮೋಡ ಬಿತ್ತನೆ ಮಾಡಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಕಾಶ ಕೋಳಿವಾಡ ತಮ್ಮ ಭಾಗದ ರೈತರ ಹಿತದೃಷ್ಟಿಯಿಂದ ಹಾವೇರಿಯಲ್ಲಿ ಮೋಡ ಬಿತ್ತನೆ ಮಾಡಿಸುತ್ತಿದ್ದಾರೆ. ಆದರೆ, ಸದ್ಯಕ್ಕೆ ಆ ಮಟ್ಟದ ಭೀಕರ ಪರಿಸ್ಥಿತಿ ಇಲ್ಲ. ಇನ್ನು ಐದಾರು ದಿನಗಳಲ್ಲಿ ಮಳೆ ಇನ್ನು ಸುಧಾರಿಸಲಿದೆ. ಹಾಗೊಂದು ವೇಳೆ ಪರಿಸ್ಥಿತಿ ಕೈಮೀರಿದರೆ, ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡಿಸುತ್ತೇವೆ. ಈ ಹಿಂದೆ ಬೆಳಗಾವಿಯಲ್ಲಿ ನಾವು ಮೋಡ ಬಿತ್ತನೆ ಮಾಡಿಸಿದ್ದೇವೆ ಎಂದರು.
ನಗರ ಸ್ಥಳೀಯ ಸಂಸ್ಥೆಗ ವ್ಯಾಪ್ತಿಯಲ್ಲಿ ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ, ವ್ಯಾಪಾರಿ ಮಾಡಿಕೊಂಡಿದ್ದರಿಂದ ಸಂಚಾರ ದಟ್ಟಣೆ, ಜನಸಾಮಾನ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಅತಿಕ್ರಮಣ ಮಾಡಿಕೊಂಡಿರುವ ಜಾಗಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಹೀಗಾಗಿ ನ್ಯಾಯಾಲಯದ ಈ ಆದೇಶವನ್ನು ಪಾಲಿಸುವುದು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಕರ್ತವ್ಯವಾಗಿದೆ. ಈಗಾಗಲೇ ಬೆಂಗಳೂರು ಸೇರಿ ಎಲ್ಲೆಡೆ ಕಾರ್ಯಾಚರಣೆ ನಡೆದಿದೆ. ಅದೇ ನಿಟ್ಟಿನಲ್ಲಿ ಬೆಳಗಾವಿ ಮಹಾನಗರ ಸೇರಿ ಜಿಲ್ಲೆಯಲ್ಲಿಯೂ ಅತಿಕ್ರಮಣ ಜಾಗಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪಕ್ಷದಲ್ಲಿ ಆಗುತ್ತಿರುವ ಎಲ್ಲ ಬೆಳವಣಿಗೆಗಳನ್ನು ವರಿಷ್ಕರು ಗಮನಿಸುತ್ತಿದ್ದು,ಸೂಕ್ತ ಸಮಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ವಿಷಯದಲ್ಲಿ ಹೈಕಮಾಂಡ್, ಮುಖ್ಯಮಂತ್ರಿ ಸೇರಿಕೊಂಡು ತೀರ್ಮಾನಿಸಲಿದ್ದಾರೆ.
- ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ