ಬೆಳಗಾವಿ ಬುಡಾ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸತೀಶ ಜಾರಕಿಹೊಳಿ ಮಾತನಾಡಿದರು. ಅಭಯ ಪಾಟೀಲ, ಹಣುಮಂತ ಕೊಂಗಾಲಿ ಇತರರಿದ್ದರು.
ಬೆಳಗಾವಿ:ಉದ್ಯೋಗ ಅರಸಿ ಬೆಳಗಾವಿಯಿಂದ ಹೊರ ಜಿಲ್ಲೆ ಹಾಗೂ ರಾಜ್ಯಗಳಿಗೆ ತೆರಳುತ್ತಿರುವ ಯುವಕರಿಗೆ ಸ್ಥಳೀಯವಾಗಿಯೇ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ರೂಪುರೇಷೆ ಸಿದ್ಧಪಡಿಸಿ ಮುಂದಿನ ಹಂತದ ಕಾರ್ಯಗಳಿಗೆ ವೇಗ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿ, ಬೆಳಗಾವಿಯಲ್ಲಿ ಐಟಿ ಹಾಗೂ ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ. ಸ್ಥಳೀಯವಾಗಿ ಉದ್ಯೋಗಾವಕಾಶಗಳ ಕೊರತೆಯಿಂದ ಯುವಕರು ಉದ್ಯೋಗಕ್ಕಾಗಿ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಈ ಪರಿಸ್ಥಿತಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಐಟಿ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಐಟಿ ಪಾರ್ಕ್‌ಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ, ಸಂಪರ್ಕ ವ್ಯವಸ್ಥೆ ಹಾಗೂ ಇತರ ಸೌಲಭ್ಯಗಳ ಕುರಿತು ಸಮಗ್ರ ಯೋಜನೆ ರೂಪಿಸಿ ಸರ್ಕಾರದ ಮುಂದಿನ ಹಂತದ ಕ್ರಮಗಳಿಗೆ ಅನುಕೂಲವಾಗುವಂತೆ ಪ್ರಸ್ತಾವನೆ ಸಿದ್ಧಪಡಿಸಬೇಕು.ನಗರ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ ಪ್ಲಾನ್ ರೂಪಿಸಬೇಕು ಎಮದರು.
ಶಾಸಕ ಅಭಯ ಪಾಟೀಲ್, ಉಪಮೇಯರ ಹಣುಮಂತ ಕೊಂಗಾಲಿ, ಸಮೀವುಲ್ಲಾ ಮಾಡಿವಾಲೆ, ಪುಷ್ಪಾ ಪರ್ವತರಾವ, ಬುಡಾ ಆಯುಕ್ತ ಶಕೀಲ್ ಅಹ್ಮದ ಇತರರಿದ್ದರು.