ಸಭೆಯಲ್ಲಿ ಜಗದೀಶ್ ಶೆಟ್ಟರ್, ರಾಹುಲ ಶಿಂಧೆ ಮಾತನಾಡಿದರು.
ಬೆಳಗಾವಿ: ಸರ್ಕಾರದ ಅಭಿವೃದ್ಧಿ ನಿಗಮಗಳಿಂದ ಮಂಜೂರಾಗಿರುವ ಸಬ್ಸಿಡಿ ಸಾಲ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ನೀಡದೆ ವಿಳಂಬ ಮಾಡುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಇನ್ನು ಸಹನೆ ಇಲ್ಲ. ಬ್ಯಾಂಕ್ ವ್ಯವಸ್ಥಾಪಕರು, ಸಿಬ್ಬಂದಿ ಹಾಗೂ ಸಂಬಂಧಿಸಿದ ಲೀಡ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಖಡಕ್ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ಯೋಜನೆಗಳ ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡುವುದರಲ್ಲಿ ನಿರ್ಲಕ್ಷ್ಯ ಮಾಡುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
“ಜೂನ್ 29ರೊಳಗೆ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಿ. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿ. ಒಂದು ವರ್ಷದಿಂದ ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸೂಚನೆಗೂ ಬೆಲೆ ನೀಡದಿದ್ದರೆ ಸಭೆ ನಡೆಸುವುದರ ಅರ್ಥವೇನು?” ಎಂದು ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಸರ್ಕಾರದ ಯೋಜನೆಗಳಿಗೆ ಬಿಡುಗಡೆಯಾದ ಸಬ್ಸಿಡಿ ಹಣ ಲಭ್ಯವಿದ್ದರೂ ಫಲಾನುಭವಿಗಳಿಗೆ ಸಾಲ ನೀಡದೆ ವಿಳಂಬ ಮಾಡುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
“ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಫಲಾನುಭವಿಗಳನ್ನು ಅಲೆದಾಡಿಸುವುದು ಸರಿಯಲ್ಲ. ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪದಿದ್ದರೆ ಅದಕ್ಕೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ” ಎಂದು ಹೇಳಿದರು.
ಸಬ್ಸಿಡಿ ಹಣ ಜಮೆಯಾಗಿದ್ದರೂ ಸಾಲ ವಿತರಣೆ ಮಾಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಬಡವರಿಗೆ ಸಬ್ಸಿಡಿ ಸಾಲ ನೀಡದವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಜಿಪಂ ಸಿಇಒ ಅವರಿಗೆ ಸಂಸದರು ಸೂಚಿಸಿದರು.