ಕುಮಾರ ಗಂಧರ್ವ ರಂಗಮಂದಿರದಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಉದಯಕುಮಾರ್ ಟಿ.ಬಿ. ಮಾತನಾಡಿದರು.
ಬೆಳಗಾವಿ:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಸರ್ಕಾರ ಜಾತಿ ಪ್ರಮಾಣ ಪತ್ರ ವಿತರಣೆಗೆ ವಿಶೇಷ ವ್ಯವಸ್ಥೆ ಮಾಡಿದ್ದು, ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಉದಯಕುಮಾರ್ ಟಿ.ಬಿ. ಹೇಳಿದರು.
ಬುಧವಾರ ಕುಮಾರ ಗಂಧರ್ವ ರಂಗಮಂದಿರದಲ್ಲಿ ತಾಲೂಕು ಆಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಅಂಗನವಾಡಿ ಸಿಬ್ಬಂದಿ, ಶಿಕ್ಷಕಿಯರು ಹಾಗೂ ಪಾಲಿಕೆಯ ಆರೋಗ್ಯ ಶಾಖೆ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೆಲ ಮತದಾರರಿಗೆ ಮ್ಯಾಪಿಂಗ್ ಸಮಸ್ಯೆ, ಪ್ರೊಜನಿ ವಿವರಗಳ ಕೊರತೆ ಹಾಗೂ 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವಂತಹ ಪ್ರಕರಣಗಳು ಕಂಡುಬರುತ್ತಿವೆ. ಇಂತಹ ಮತದಾರರಿಗೆ ಸರ್ಕಾರದ ಆದೇಶದಂತೆ ಜಾತಿ ಪ್ರಮಾಣ ಪತ್ರವನ್ನು ಪೂರಕ ದಾಖಲೆಯಾಗಿ ನೀಡಲಾಗುತ್ತಿದೆ. ಈ ಪ್ರಕ್ರಿಯೆ ಸಂಪೂರ್ಣವಾಗಿ ತಂತ್ರಾಂಶದ ಆ್ಯಪ್ ಮೂಲಕ ನಡೆಯಲಿರುವುದರಿಂದ ಸಿಬ್ಬಂದಿ ತರಬೇತಿಯಲ್ಲಿ ನೀಡುವ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಹಣಮಂತ ಶಿರಹಟ್ಟಿ ಮಾತನಾಡಿ, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ಎಲ್ಲರೂ ನಿಗದಿತ ಅವಧಿಯಲ್ಲಿ ಜವಾಬ್ದಾರಿಯಿಂದ ಕಾರ್ಯ ಪೂರ್ಣಗೊಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಡಿಪಿಓ ಅನೀಲ ಕುಮಾರ, ಪರಿಸರ ಅಭಿಯಂತರ ಹಣಮಂತ ಕಲಾದಗಿ, ಕಂದಾಯ ನಿರೀಕ್ಷಕ ಚಂದ್ರಶೇಖರ ಇತರರಿದ್ದರು.