ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು, ರವಿ ಬಂಗಾರೆಪ್ಪನವರ, ಎಚ್.ಡಿ.ಕೋಳೇಕರ್, ಮಹಾಂತೇಶ ಮುರಗೋಡ ಇತರರಿದ್ದರು.
ಬೆಳಗಾವಿ:ಗ್ರಾಮೀಣ ಭಾಗದಲ್ಲಿ ಗೋಮಾಳಗಳನ್ನು ಗುರುತಿಸಿ ದನಕರುಗಳಿಗೆ ಮೇವು ಪೂರೈಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು. ಒತ್ತುವರಿಯಾಗಿದ್ದರೆ ತಕ್ಷಣವೇ ತೆರವುಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗೋಮಾಳ ಸಂರಕ್ಷಣೆ ಮಾಡಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಆದ್ಯತೆ ನೀಡಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೂಡ ಸಹಕಾರ ನೀಡಬೇಕು ಎಂದರು.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಪಂಗಳು ಕೂಲಿಕಾರರಿಗೆ ನಿರಂತರವಾಗಿ ಕೂಲಿ ಕೆಲಸ ಒದಗಿಸಬೇಕು.ಮಳೆ ಸಮರ್ಪಕವಾಗಿ ಆಗದೇ ಇರುವುದರಿಂದ ಗ್ರಾಮೀಣ ಭಾಗದ ಕೂಲಿಕಾರರಿಗೆ ಕೂಲಿ ಕೆಲಸದ ಅಗತ್ಯತೆ ಇದೆ. ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಳ್ಳಲು ಅನುಮೋದಿತ ಕಾಮಗಾರಿಗಳು ಇಲ್ಲದಿದ್ದ ಪಕ್ಷದಲ್ಲಿ ಸದ್ಯ 5 ಕಾಮಗಾರಿಗಳ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಿದರೆ ತುರ್ತಾಗಿ ಅನುಮೋದನೆ ನೀಡಲಾಗುವುದು ಎಂದರು.
ಗ್ರಾಪಂ ವ್ಯಾಪ್ತಿಯಲ್ಲಿ ಬರಗಾಲ ನಿರ್ವಹಣೆ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಬೇಕು. ಕೂಲಿಕಾರರು ಕೆಲಸಕ್ಕಾಗಿ ಗುಳೆ ಹೋಗದಂತೆ ಕ್ರಮವಹಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಬೇಕು. ಶಾಶ್ವತ ಜೀವನೋಪಾಯಕ್ಕೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ಕೂಡ ಕೈಗೊಳ್ಳಲು ಕ್ರಮವಹಿಸಬೇಕು. ಯೋಜನೆಯ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು.
ವಿಬಿ-ಜಿ ರಾಮ್ ಜಿ ಯೋಜನೆಯಡಿ ಒಟ್ಟು 318 ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ನೀರಿನ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯಗಳು, ಜೀವನೋಪಾಯ ಅಭಿವೃದ್ಧಿ, ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಹೀಗಾಗಿ, ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಯೋಜನೆ ರೂಪಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.
ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ, ಆರೋಗ್ಯ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೂಡ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೈಗೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ.ಡಿ. ಕೋಳೆಕರ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಡಿಎಚಒ ಡಾ. ಈಶ್ವರ ಗಡಾದ, ಡಿಎಫಒ ರಾಜೇಶ್ವರಿ ಈರನಟ್ಟಿ ಇತರರಿದ್ದರು.