ಚಿಕ್ಕೋಡಿ ಪಟ್ಟಣದ ಕೆಎಲ್‌ಇ ಸಂಸ್ಥೆ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮಕ್ಕೆ ಪ್ರೊ.ಸಿ.ಎಂ.ತ್ಯಾಗರಾಜ ಚಾಲನೆ ನೀಡಿದರು. ಮಹಾಂತೇಶ ಕವಟಗಿಮಠ, ಪಿ.ವೆಂಕಟರೆಡ್ಡಿ, ಡಾ.ದರ್ಶನ ಬಿಳ್ಳೂರ ಇತರರಿದ್ದರು. 
ಬೆಳಗಾವಿ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೆಎಲ್‌ಇ ಧ್ಯೇಯ

ಚಿಕ್ಕೋಡಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಕೆಎಲ್‌ಇ ಸಂಸ್ಥೆಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಕೆಎಲ್‌ಇ ಸಂಸ್ಥೆಯ ಸ್ವತಂತ್ರ ಪಿಯು ವಿಜ್ಞಾನ ಮಹಾವಿದ್ಯಾಲಯ ಅತ್ಯುತ್ತಮ ಮೂಲಸೌಕರ್ಯ ಹಾಗೂ ತಜ್ಞ ಶಿಕ್ಷಕರನ್ನು ಹೊಂದಿದ್ದು ಗಡಿಭಾಗದ ಅತ್ತ್ಯುತ್ತಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದರು.
ಪಟ್ಟಣದ ಕೆಎಲ್‌ಇ ಸಂಸ್ಥೆ ಸ್ವತಂತ್ರ ಪಿಯು ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾನುವಾರ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಆಗಮನ-2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆಎಲ್‌ಇ ಸಂಸ್ಥೆ ಕೇವಲ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣವನ್ನು ಮಾತ್ರ ನೀಡುತ್ತಿಲ್ಲ. ಹಲವಾರು ವೃತ್ತಿಪರ ಕೋರ್ಸ್‌ಗಳನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಐಎಎಸ್, ಐಪಿಎಸ್‌ನಂಥ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು ಎಂದರು.
ಪಿಯು ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ನಿರಂತರ ಅದ್ಯಯನ, ಕಠಿಣ ಪರಿಶ್ರಮ ಯಶಸ್ಸಿನ ಗುಟ್ಟಾಗಿದೆ. ತಂದೆ-ತಾಯಿ ಕನಸು ನನಸು ಮಾಡಲು ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿ, ಕೆಎಲ್‌ಇ ಸಂಸ್ಥೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಚಿಕ್ಕೋಡಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಸಂಸ್ಥೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸಂಸ್ಥೆಗಳಲ್ಲಿ ಓದುತ್ತಿರುವುದು ಸಂಸ್ಥೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಮಾರ್ಗದರ್ಶಕರಾದ ಡಾ.ಪ್ರಭಾಕರ ಕೋರೆ ದೂರದೃಷ್ಟಿಯಿಂದ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಶ್ಲಾಘಿಸಿದರು.
ಜೆಇಇ, ನೀಟ್, ಕೆಸಿಇಟಿ, ಕ್ರೀಡೆ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪ್ರಾಚಾರ್ಯ ಪಿ.ವೆಂಕಟರೆಡ್ಡಿ, ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ದರ್ಶನ ಬಿಳ್ಳೂರ, ವಿನೋದ ಸಾವಂತ್ರೆ, ಸಚಿನ ಮೆಕ್ಕಳಕಿ ಇತರರಿದ್ದರು.