ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು. ಚನ್ನರಾಜ ಹಟ್ಟಿಹೊಳಿ, ಯುವರಾಜ ಕದಂ, ಲಕ್ಷ್ಮಣರಾವ ಚಿಂಗಳೆ, ಮೊಹಮ್ಮದ ರೋಷನ್, ರಾಹುಲ ಶಿಂಧೆ ಇತರರಿದ್ದರು.
ಬೆಳಗಾವಿ:ಜಿಲ್ಲೆಯ ಜಲಾಶಯಗಳಲ್ಲಿ ಎರಡು ತಿಂಗಳವರೆಗೆ ಕುಡಿಯುವ ನೀರು ಪೂರೈಸಲು ಸಾಕಾಗುವಷ್ಟು ನೀರಿನ ಸಂಗ್ರಹವಿದೆ. ಆದರೆ.ಅಧಿಕಾರಿಗಳ ನಿರ್ವಹಣಾ ಲೋಪದಿಂದ ಕೆಲವು ಕಡೆ ಸಮಸ್ಯೆಗಳಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಬರ ನಿರ್ವಾಹಣೆ, ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಹಿನ್ನೆಲೆ ಜಿಲ್ಲೆಯ ಕೆಲವು ಭಾಗಗಳಲ್ಲಿನ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಅಂತಹ ಕಡೆ ತಕ್ಷಣವೇ ತುರ್ತು ಕ್ರಮ ವಹಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ,ವಿಳಂಬ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಬೆಳಗಾವಿ ಮಹಾನಗರ ಸೇರಿ ಜಿಲ್ಲೆಯ್ಯದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆಲವುಕಡೆ ತಾಂತ್ರಿಕ ಕಾರಣ ಹಾಗೂ 24/7 ನೀರು ಸರಬರಾಜು ಯೋಜನೆ ವಿಳಂಬದಿಂದಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಇದನ್ನು ಸರಿಪಡಿಸಿ ಸಮರ್ಪಕವಾಗಿ ನೀರು ಪೂರೈಕೆ ಮಾಡಿ.ಗ್ರಾಮೀಣ ಅಥವಾ ನಗರ ಭಾಗಗಳಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾದಲ್ಲಿ ತಕ್ಷಣವೇ ಟ್ಯಾಂಕರ ಮೂಲಕ ನೀರು ಒದಗಿಸಲು ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಅನುದಾನ ಹಾಗೂ ಸಿದ್ಧತೆ ಮಾಡಿಕೊಳ್ಳಬೇಕು. ಬರ ನಿರ್ವಹಣೆ ವಿಷಯದಲ್ಲಿ ಪದೇ ಪದೇ ತಪ್ಪು ಮುಂದುವರಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ವಾಡಿಕೆಗಿಂತ ಪ್ರತಿಶತ 26 ರಷ್ಟು ಕಡಿಮೆ ಮಳೆಯಾಗಿದೆ.ಜಿಲ್ಲೆಯಲ್ಲಿ 7 ತಾಲೂಕುಗಳಲ್ಲಿ 32 ಗ್ರಾಮಗಳು ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದು, 15 ಗ್ರಾಮಗಳಿಗೆ ಟ್ಯಾಂಕರುಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, 23 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಮಹಾನಗರ ಪಾಲಿಕೆ ವ್ಯಾಪ್ತಿಗೆ ಹಿಡಕಲ್ಹಾಗೂ ರಕ್ಕಸಕೊಪ್ಪ ಜಲಾಶಯಗಳಿಂದ ನೀರು ಸರಬರಾಜು ಆಗುತ್ತಿವೆ ನೀರು ಪೂರೈಕೆಗಾಗಿ ಬಳಸಿಕೊಳ್ಳಲಾಗುವ ಟ್ಯಾಂಕರ್ ಗಳಿಗೆ ಜಿಪಿಎಸ್ ಅಳವಡಿಸಲು ಸೂಚಿಸಲಾಗಿದೆ ಎಂದರು.
ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮರಾವ್ ಚಿಂಗಳೆ, ಕಾಡಾ ಅಧ್ಯಕ್ಷ ಯುವರಾಜ ಕದಂ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಎಸ್‌ಪಿ ಕೆ.ರಾಮರಾಜನ್, ಸಿಇಒ ರಾಹುಲ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಇತರರಿದ್ದರು.
6.01 ಲಕ್ಷ ಹೆಕ್ಟರ್ ಪ್ರದೇಶ ಬಿತ್ತನೆ ಗುರಿ
ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆ ಸುರಿಸಿದ್ದರಿಂದ 6,01,688 ಹೆಕ್ಟೆರ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಕಿಕೊಳ್ಳಲಾಗಿತ್ತು.ಅದರಲ್ಲಿ ಶೇ. 80 ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲೆಯಾದ್ಯಂತ 35 ರೈತ ಸಂಪರ್ಕ ಕೇಂದ್ರ ಹಾಗೂ 139ಪಿಕೆಪಿಎಸ್ ಸೇರಿ ಒಟ್ಟು 174 ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. 1,21,889 ಮೆ.ಟನ್ ವಿವಿಧ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಹೆಸರು ಹಾಗೂ ಉದ್ದು ಬೆಳೆ ವಿಮಾ ಮೊತ್ತ ಪಾವತಿಸಲು ಜುಲೈ 15 ಹಾಗೂ ಉಳಿದ ಬೆಳೆಗಳಿಗೆ ವಿಮಾ ಮೊತ್ತ ಪಾವತಿಸಲು ಜು.30 ಕೊನೆಯ ದಿನವಾದೆ ಎಂದು ಕೃಷಿ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ್ ತಿಳಿಸಿದರು.
ಜಿಲ್ಲೆಯಲ್ಲಿ ಒಂದು ವೇಳೆ ಮಳೆ ಕೈಕೊಟ್ಟು, ಬಿತ್ತಿದ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾದರೆ ಸರ್ಕಾರ ರೈತರ ಕೈಬಿಡುವುದಿಲ್ಲ. ತಕ್ಷಣವೇ ಆಯಾ ಭಾಗಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು.
-ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ