ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿದರು. ಯುವರಾಜ ಕದಂ, ಅಡಿವೇಶ ಇಟಗಿ, ಶಂಕರಗೌಡ ಪಾಟೀಲ ಇತರರಿದ್ದರು.
- ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಮಾಹಿತಿ
- ನಾಳೆ ಬೆನಕನಹಳ್ಳಿಯಲ್ಲಿ ವಿವಿಧ ಕಾರ್ಯಕ್ರಮ
ಬೆಳಗಾವಿ: ಪಂಚಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ರಾಜ್ಯದಲ್ಲಿ ಮನೆಮಾತಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 14,500 ಹಿರಿಯ ನಾಗರಿಕರೊಂದಿಗೆ ಜನ್ಮದಿನ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಗಾರ್ಡನ್ ಕೋರ್ಟ್ ಎದುರಿನ ಮೈದಾನದಲ್ಲಿ ಫೆ.14ರಂದು ಮಧ್ಯಾಹ್ನ 2 ಗಂಟೆಗೆ ಹಿರಿಯ ನಾಗರಿಕರ ಕ್ರೀಡೆ, ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಜನ್ಮದಿನದ ಕಾರ್ಯಕ್ರಮಕ್ಕೆ ಸಚಿವರು, ಶಾಸಕರು, ಸಂಸದರು, ವಿವಿಧ ಮಠಾಧೀಶರನ್ನು ಆಹ್ವಾನಿಸಲಾಗಿದೆ. ರಾಜ್ಯದ ನಾಯಕರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದರು.
ಗ್ರಾಮೀಣ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎರಡೂವರೆ ವರ್ಷಗಳಿಂದ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. 150 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿದ್ದಾರೆ. ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತು ಧಾರ್ಮಿಕ ರಂಗಕ್ಕೆ ಹೆಚ್ಚಿನ ಅನುದಾನ ತಂದಿದ್ದಾರೆ. ಹಿರಿಯರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ಗ್ರಾಮೀಣ ಕ್ಷೇತ್ರದಲ್ಲಿರುವ ಹಿರಿಯ ನಾಗಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಹೀಗೆ ವಿವಿಧ ಸೌಲಭ್ಯ ಕಲ್ಪಿಸಿ ಅವರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪ್ರತಿ ಸಮುದಾಯದ ಅಭಿವೃದ್ಧಿಗೆ ಒತ್ತು ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗ್ರಾಮೀಣ ಕ್ಷೇತ್ರವನ್ನು ಮಾದರಿಯಾಗಿಸಿದ್ದಾರೆ. ಜನ್ಮದಿನದ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ತಾಲೂಕಿನಲ್ಲಿರುವ ಹಿರಿಯ ನಾಗರಿಕರ ವೃದ್ಧಾಶ್ರಮಗಳಲ್ಲಿರುವ ಹಿರಿಯರಿಗೂ ಆಹ್ವಾನ ನೀಡಲಾಗಿದೆ ಎಂದು ವಿವರಿಸಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಬೆಳಗಾವಿ ತಾಪಂ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಅಡಿವೇಶ ಇಟಗಿ ಇತರರಿದ್ದರು.