ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಮನರೇಗಾ ಉಳಿಸಿ ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದರು. ಲಕ್ಷ$್ಮಣರಾವ್ ಚಿಂಗಳೆ, ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳ್ಕರ್ ಇತರರಿದ್ದಾರೆ.
ಬೆಳಗಾವಿ: ಮನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಈ ಹಿಂದೆ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಸಲಾಗಿದ್ದ ಹೋರಾಟ ಮಾದರಿಯಲ್ಲೇ ತಿಂಗಳಪೂರ್ತಿ ವಿವಿಧ ಹಂತಗಳಲ್ಲಿ ಕಾಂಗ್ರೆಸ್ನಿಂದ ಪ್ರತಿಭಟಿಸಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ ಕಳವು ಬಗ್ಗೆ ಪ್ರಶ್ನೆ ಎತ್ತಿದ ನಂತರ ದೇಶಾದ್ಯಂತ ಆಂದೋಲನದ ಸ್ವರೂಪ ಪಡೆದುಕೊಳ್ಳುತ್ತಿತ್ತು. ಇದನ್ನು ಡೈವರ್ಟ್ ಮಾಡುವುದಕ್ಕಾಗಿಯೇ ನರೇಗಾದಿಂದ ಮಹಾತ್ಮ ಗಾಂಧೀಜಿ ಹೆಸರು ತೆಗೆದಿದ್ದಾರೆ. ಅನೇಕ ಬದಲಾವಣೆ ಮಾಡಿ, ನ್ಯೂನತೆಗಳಿದ್ದವು ಎಂಬ ನೆಪ ಹೇಳಿದ್ದಾರೆ ಎಂದು ಆರೋಪಿಸಿದರು.
ಇಂದಿನಿಂದ ಪ್ರತಿಭಟನೆ: ಜ.11ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ, ಜ.12ರಿಂದ 29ರವರೆಗೆ ಗ್ರಾಪಂ ಮಟ್ಟದಲ್ಲಿ ಜನಸಂಪರ್ಕ ಸಮಾವೇಶ, ಜ.30ರಂದು ಗ್ರಾಪಂ ವಾರ್ಡ್ ಮತ್ತು ಬ್ಲಾಕ್ ಮಟ್ಟದಲ್ಲಿ ಶಾಂತಿಯುತ ಧರಣಿ, ಜ.31ರಿಂದ ಫೆ.6ರವರೆಗೆ ಜಿಲ್ಲಾಮಟ್ಟದಲ್ಲಿ ಮನರೇಗಾ ಬಚಾವೋ ಧರಣಿ, ಫೆ.7ರಿಂದ 15ರವರೆಗೆ ರಾಜ್ಯ ಮಟ್ಟದಲ್ಲಿ ಬಿಜೆಪಿ ಸರ್ಕಾರ ಇರುವಲ್ಲಿ ವಿಧಾನಸೌಧಗಳಿಗೆ ಹಾಗೂ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಸರ್ಕಾರವಿರುವ ರಾಜ್ಯದಲ್ಲಿ ಬಿಜೆಪಿ ರಾಜ್ಯ ಕಚೇರಿ ಇಲ್ಲವೇ ಕೇಂದ್ರ ಸರ್ಕಾರದ ಪ್ರಮುಖ ಕಚೇರಿಗಳಿಗೆ ಮುತ್ತಿಗೆ ಹಾಕುವುದು, ಫೆ.16ರಿಂದ 25ರವರೆಗೆ ಆಯಾ ರಾಜ್ಯದಲ್ಲಿ ವಿಭಾಗವಾರು ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಫೆ.25ರವರೆಗೆ ನಿರಂತರವಾಗಿ ಹೋರಾಟ ನಡೆಯುತ್ತಿರುತ್ತದೆ. ಈ ಮಧ್ಯೆ ಬಿಜೆಪಿ ಸರ್ಕಾರ ತಿದ್ದುಪಡಿ ಮರಳಿ ಪಡೆಯುವ ಬಗ್ಗೆ ಕಾದು ನೋಡುತ್ತೇವೆ. ಇಲ್ಲದಿದ್ದರೆ ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳುತ್ತೇವೆ ಎಂದರು.
ಬುಡಾ ಅಧ್ಯಕ್ಷ ಲಕ್ಷ$್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಮೃಣಾಲ ಹೆಬ್ಬಾಳ್ಕರ್, ವಾಕರಸಾ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನಮಣ್ಣವರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಧಾಕರ ಬಡಿಗೇರ, ಕಾಡಾ ಅಧ್ಯಕ್ಷ ಯುವರಾಜ ಕದಂ ಇತರರಿದ್ದರು.