ನಿಡಸೋಸಿ ರಸ್ತೆ ಕಾಮಗಾರಿ ಅಡಚಣೆ ಶೀಘ್ರ ನಿವಾರಣೆ 
ಬೆಳಗಾವಿ

ನಿಡಸೋಸಿ ರಸ್ತೆ ಕಾಮಗಾರಿ ಅಡಚಣೆ ಶೀಘ್ರ ನಿವಾರಣೆ

ಸಂಕೇಶ್ವರ: ನಿಡಸೋಸಿ ರಸ್ತೆ ಅಭಿವೃದ್ಧಿ ಮತ್ತು ವಿಸ್ತರಣೆ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರ ನಿವಾರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ರಸ್ತೆ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿರುವ ಕಾಮಗಾರಿ ಕುರಿತು ಮಾಹಿತಿ ಪಡೆದರು. ರಸ್ತೆ ವಿಸ್ತರಣೆ ವೇಳೆ ಕೆಲವೆಡೆ ಅಳತೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಸಾರ್ವಜನಿಕರ ದೂರಿನ
ಹಿನ್ನೆಲೆಯಲ್ಲಿ ಸ್ಥಳದಲ್ಲೇ ಇದ್ದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರಸ್ತೆ ನಿರ್ಮಾಣದ ಹಾದಿಯಲ್ಲಿ ಮುಸ್ಲಿಂ ಸಮುದಾಯದ ಸ್ಮಶಾನ ಹಾಗೂ ಕೆಲವು ವಾಣಿಜ್ಯ ಮಳಿಗೆ ಸ್ಥಳಾಂತರಕ್ಕೆ ಸಂಬಂಧಿಸಿ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಯಾವುದೇ ತೊಂದರೆಯಾಗದಂತೆ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಮುಂದಿನ 10 ದಿನಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದರು.
ಎಸ್ಪಿ ಕೆ.ರಾಮರಾಜನ ಮಾತನಾಡಿ, ಪಟ್ಟಣದ ಕೋಮು ಸೌಹಾರ್ದ ಮತ್ತು ಶಾಂತಿ ವ್ಯವಸ್ಥೆಗೆ ದಕ್ಕೆಯಾಗದಂತೆ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಶೀಘ್ರ ಸಮಸ್ಯೆ ಬಗೆಹರಿಸಿ, ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಪ್ರವೀಣ ಮಡ್ಯಾಳ ಇತರರಿದ್ದರು.