ಕೊಳದೂರು ಹಾಗೂ ಮದನಭಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚುವ ಸರ್ಕಾರದ ಕ್ರಮ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಮನಗೌಡ ಪಾಟೀಲ, ಬಸವರಾಜ ಕೌಜಲಗಿ ಇತರರಿದ್ದರು.
- ಕೊಳದೂರು, ಮದನಭಾವಿ ಗ್ರಾಮಸ್ಥರ ಪ್ರತಿಭಟನೆ
- ತೀವ್ರ ಹೋರಾಟದ ಎಚ್ಚರಿಕೆ
ಬೈಲಹೊಂಗಲ: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಕೊಳದೂರು ಹಾಗೂ ಮದನಭಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮ ಖಂಡಿಸಿ ಗ್ರಾಮಸ್ಥರು ಹಾಗೂ ಪೋಷಕರು ಎಐಡಿಎಸ್‌ಒ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
೧೯೩೮ರಲ್ಲಿ ಸ್ಥಾಪನೆಯಾದ ಕೊಳದೂರು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ೧೯೨೭ರಲ್ಲಿ ಆರಂಭವಾದ ಮದನಭಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದಶಕಗಳ ಇತಿಹಾಸ ಹೊಂದಿದ್ದು, ಸಹಸ್ರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿವೆ. ಇಂತಹ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬದಲು ಮುಚ್ಚಲು ಮುಂದಾಗಿರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿ, ಗ್ರಾಮೀಣ ಪ್ರದೇಶಗಳ ಶಾಲೆಗಳನ್ನು ಮುಚ್ಚುವುದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಗ್ರಾಮಗಳ ಶಾಲೆ ವಿಲೀನಗೊಳಿಸುವುದು ಜನವಿರೋಧಿ ಕ್ರಮವಾಗಿದೆ. ಕೂಡಲೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.
ಗ್ರಾಮಸ್ಥ ಬಸವರಾಜ ಕೌಜಲಗಿ ಮಾತನಾಡಿ, ನಮ್ಮ ಹಿರಿಯರು ನೀಡಿದ ಜಾಗದಲ್ಲಿ ಶಾಲೆ ನಡೆಯುತ್ತಿದೆ. ಶಾಲೆಯ ಅಭಿವೃದ್ಧಿಗೆ ಇನ್ನಷ್ಟು ಭೂಮಿ ನೀಡಲು ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷ ರಾಮನಗೌಡ ಪಾಟೀಲ, ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.