ಜಿಲ್ಲಾ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು. ಅವರು ಕಂಡ ಕನಸಿನ ಭಾರತ ನಿರ್ಮಾಣಕ್ಕಾಗಿ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನ ಅಡಗಿದೆ. ಅವರ ತ್ಯಾಗಕ್ಕೆ ನಿಜವಾದ ಗೌರವ ಸಲ್ಲಿಸುವುದು ದೇಶದ ಪ್ರಗತಿಗೆ ಶ್ರಮಿಸುವ ಮೂಲಕವೇ ಸಾಧ್ಯ ಎಂದರು.
ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಇಂದಿನ ಪೀಳಿಗೆ ದೇಶದ ಜವಾಬ್ದಾರಿಯನ್ನು ಅರಿತುಕೊಂಡು ಮುನ್ನಡೆಯಬೇಕು. ಅಭಿವೃದ್ಧಿಯ ಪ್ರತಿಯೊಂದು ಕ್ಷೇತ್ರದಲ್ಲೂ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿದಾಗ ಮಾತ್ರ ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಪಿಎಂ ಪೋಷಣ ಅಭಿಯಾನದ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಸಹ ಕಾರ್ಯದರ್ಶಿ ರಾಹುಲ್ ಕಾಂಬ್ಳೆ ಸೇರಿದಂತೆ ಜಿಲ್ಲಾ ಪಂಚಾಯತ್‌ನ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.