ಬೆಳಗಾವಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ಸಕ್ಕರೆ ಕಾರ್ಖಾನೆ ಪದಾಧಿಕಾರಿಗಳು ಸಿಎಂ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದರು. ಡಿಸಿಎಂ ಡಾ.ಜಿ.ಪರಮೇಶ್ವರ, ಸಚಿವ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಚನ್ನರಾಜ ಹಟ್ಟಿಹೊಳಿ ಇತರರಿದ್ದರು.
ಬೆಳಗಾವಿ :ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿರತೆ ಕಾಪಾಡುವುದು ಹಾಗೂ ಕಬ್ಬು ಬೆಳೆಗಾರ ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ನಿಯೋಗ ಮನವಿ ಸ್ವೀಕರಿಸಿ ಮಾತನಾಡಿ, ಸಕ್ಕರೆ ಕಾರ್ಖಾನೆಗಳ ಬೇಡಿಕೆಯ ಪ್ರತಿಯೊಂದು ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಹಾಗೂ ನಿಗದಿತ ಸಮಯದಲ್ಲಿ ಕಬ್ಬಿನ ಬಿಲ್ ಪಾವತಿಸುವ ಮೂಲಕ ಸಕ್ಕರೆ ಕಾರ್ಖಾನೆಗಳು ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದಕ್ಕೂ ಮೊದಲು ಸಕ್ಕರೆ ಉದ್ಯಮಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ಹಾಗೂ ಆಡಳಿತಾತ್ಮಕ ಸವಾಲುಗಳ ಕುರಿತು ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಸಹಕಾರಿ ಸಕ್ಕರೆ ಕಾರ್ಖಾನೆಗಳ ಬಲವರ್ಧನೆ, ಉದ್ಯಮದ ಸುಸ್ಥಿರ ಬೆಳವಣಿಗೆ ಹಾಗೂ ಕಬ್ಬು ಬೆಳೆಗಾರ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ಚರ್ಚೆ ನಡೆಸಿದರು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಲಕ್ಷ್ಮಣ ಸವದಿ, ಬಾಬಾಸಾಹೇಬ ಪಾಟೀಲ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಮೃಣಾಲ್ ಹೆಬ್ಬಾಳ್ಕರ್, ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಇತರರಿದ್ದರು.