ಬೆಳಗಾವಿ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ, ಮೊಹಮ್ಮದ್ ರೋಷನ್, ರಾಹುಲ ಶಿಂಧೆ, ಭೂಷಣ ಬೋರಸೆ ಇತರರಿದ್ದರು.
ಬೆಳಗಾವಿ: ಗಣತಂತ್ರ ವ್ಯವಸ್ಥೆ ಭಾರತೀಯರಿಗೆ ಸರ್ವಭೌಮಾಧಿಕಾರ ಕಲ್ಪಿಸಿಕೊಟ್ಟ ದಿನವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಇಟ್ಟುಕೊಳ್ಳಲಾಗಿದ್ದ 4.24 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ತಲುಪಲಾಗಿದ್ದು, 24 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ 60 ಸಾವಿರ ರೈತರಿಗೆ ಪೂರೈಸಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 1,000 ಹೆಕ್ಟೇರ್ ಕಬ್ಬು ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆಗಳನ್ನು ಜಾರಿಗೊಳಿಸಲಾಗಿದೆ. ಬೆಳೆವಿಮೆ ಯೋಜನೆ ಮತ್ತು ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯಡಿ 9,295 ರೈತರಿಗೆ ಒಟ್ಟು 96.36 ಕೋಟಿ ರೂ. ವಿಮೆ ಪರಿಹಾರ ವಿತರಿಸಲಾಗಿದೆ ಎಂದರು.
ಲೋಕೋಪಯೋಗಿ ಇಲಾಖೆಯಿಂದ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ಸುಧಾರಣೆ ಅಡಿಯಲ್ಲಿ 2024-25ನೇ ಸಾಲಿನಲ್ಲಿ 162.14 ಕೋಟಿ ರೂ. ಅನುದಾನದಲ್ಲಿ 49 ಕಾಮಗಾರಿ ಕೈಗೊಳ್ಳಲಾಗಿದೆ. ಜಿಲ್ಲಾ ಕ್ರೀಡಾಂಗಣ ಕಾಮಗಾರಿ 100 ಕೋಟಿ ರೂ.ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿ ಕಟ್ಟಡ ನಿರ್ಮಾಣಕ್ಕೆ 75 ಕೋಟಿ ರೂ., ಹುದಲಿ ಗ್ರಾಮದ ಹತ್ತಿರ 35 ಕೋಟಿ ರೂ.ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ, ಪತ್ರಿಕಾ ಭವನ ನಿರ್ಮಾಣಕ್ಕೆ 9.90 ಕೋಟಿ ರೂ., 58 ವಾರ್ಡ್‌ಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ 27 ಕೋಟಿ ರೂ. ವೆಚ್ಚದ ಕಾಮಗಾರಿ ಟೆಂಡರ್ ಕರೆಯಲಾಗಿದೆ. ಅಮೃತ ಯೋಜನೆಯಲ್ಲಿ 7 ಕೆರೆಗಳ ಪುನಶ್ಚೇತನ ಹಾಗೂ 7 ಉದ್ಯಾನ ಸುಧಾರಣೆಗೆ ಒತ್ತು ನೀಡಲಾಗಿದೆ. ಕೋಟೆಕೆರೆ ಅಭಿವೃದ್ಧಿ ಹಾಗೂ ಪುನಶ್ಚೇತನಕ್ಕೆ 9.20 ಕೋಟಿ ರೂ. ಮೊತ್ತದ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಹೇಳಿದರು.
ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಸಿಇಒ ರಾಹುಲ್ ಶಿಂಧೆ, ಎಸ್‌ಪಿ ಕೆ.ರಾಮರಾಜನ್ ಇತರರಿದ್ದರು.