ನೌಕರಿ ಕೊಡಿಸುವುದಾಗಿ ಹಣ ಸಂಗ್ರಹ ಆರೋಪ
| ಉಪ ತಹಸೀಲ್ದಾರ್ ಶ್ರೀಖಂಡೆ ವಿರುದ್ಧ ದೂರು
ವಿಜಯವಾಣಿ ಸುದ್ದಿಜಾಲ ನಿಪ್ಪಾಣಿ
ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್‌ನಲ್ಲಿ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ, ತಮ್ಮ ಹೆಸರು ಹೇಳಿಕೊಂಡು ಹಣ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಿಪ್ಪಾಣಿ ತಹಸೀಲ್ದಾರ್ ಕಚೇರಿಯಲ್ಲಿ ಗ್ರೇಡ್-೨ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ ಶ್ರೀಖಂಡೆ ವಿರುದ್ಧ ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ಶ್ರೀ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಡಿಸಿಸಿ ಬ್ಯಾಂಕ್‌ನಲ್ಲಿ ಶೀಘ್ರದಲ್ಲೇ ನೌಕರರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟನೆ ನೀಡಿದೆ. ಸರ್ಕಾರ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಸೂಚಿಸಿದ್ದು, ಅದರಂತೆ ಅಗತ್ಯ ತಿದ್ದುಪಡಿ ಮಾಡಿಕೊಂಡು ಮತ್ತೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ನಿಪ್ಪಾಣಿ ಉಪತಹಸೀಲ್ದಾರ್ ಆಗಿರುವ ಅರುಣ ಶ್ರೀಖಂಡೆ ತಮ್ಮೊಂದಿಗೆ ಉತ್ತಮ ಸಂಪರ್ಕವಿದೆ ಎಂದು ಹೇಳಿಕೊಂಡು, ಬಿಡಿಸಿಸಿ ಬ್ಯಾಂಕ್‌ನಲ್ಲಿ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ತಮಗೆ ಯಾವುದೇ ಮಾಹಿತಿ ಇರಲಿಲ್ಲ. ನಿತ್ಯಾನಂದ ಹಿರೇಮಠ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ವಿಡಿಯೊದಿಂದ ತಮಗೆ ಆಘಾತವಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸುವಂತೆ ಹಾಗೂ ತಮ್ಮ ಹೆಸರನ್ನು ಬಳಸಿಕೊಂಡು ಅಪಪ್ರಚಾರ ಮತ್ತು ಜನರಿಗೆ ವಂಚನೆ ಮಾಡಿರುವ ಆರೋಪದ ಕುರಿತು ತನಿಖೆ ನಡೆಸಿ, ಶ್ರೀಖಂಡೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಜನರನ್ನು ವಂಚಿಸುವ ಮತ್ತು ವ್ಯಕ್ತಿಯ ಹೆಸರಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪಾರದರ್ಶಕ ನೇಮಕಾತಿ: ಜಿಲ್ಲಾ ಬ್ಯಾಂಕ್‌ನ ನೌಕರರ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಯಾವುದೇ ಶಿಫಾರಸು, ವಸೂಲಿ ಅಥವಾ ಹಣದ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ. ಸರ್ಕಾರದ ನಿಯಮಾನುಸಾರ ಅರ್ಜಿ ಸಲ್ಲಿಸಿ, ಪರೀಕ್ಷೆ ಹಾಗೂ ಸಂದರ್ಶನದ ಮೂಲಕವೇ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಯಾವುದೇ ಆಮಿಷಕ್ಕೊಳಗಾಗದೆ, ಅಽಕೃತ ನೇಮಕಾತಿ ಪ್ರಕ್ರಿಯೆ ಮೂಲಕ ಉದ್ಯೋಗ ಪಡೆಯಬೇಕು ಎಂದು ತಿಳಿಸಿದರು.
ಬಂಡಾ ಘೋರಪಡೆ ಇತರರಿದ್ದರು