ಜಾತ್ರಾ ಮಹೋತ್ಸವವು ಪರಂಪರೆಯ ಪ್ರತೀಕ
| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯ | ಸಭೆ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಮುಂಬರುವ ಮಾರ್ಚ ತಿಂಗಳಿನಲ್ಲಿ ನಡೆಯಲಿರುವ ತಾಲೂಕಿ ಮಾರಿಹಾಳ ಗ್ರಾಮದಲ್ಲಿ ನಡೆಯಲಿರುವ ಮಹಾಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕರಿಗೆ ಯಾವುದೇ ಕೊರತೆಯಾಗುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಖರ್ ಸೂಚಿಸಿದರು.
ಮಾರಿಹಾಳ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದು ಕಮೀಟಿಯವರೊಂದಿಗೆ ಚರ್ಚಿಸಿ ಅವರು ಮಾತನಾಡಿದರು.
ದೇವಿಯ ಕೃಪೆಯಿಂದ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಲಭಿಸಲಿ, ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಸೌಹಾರ್ದತೆ ನೆಲೆಸಲಿ ಎಂದು ಅವರು ಪ್ರಾರ್ಥಿಸಿದರು.
ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಯೋಜಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜಾತ್ರಾ ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಗ್ರಾಮದ ಜನರ ಒಗ್ಗಟ್ಟು, ಪರಂಪರೆ, ಸಂಸ್ಕೃತಿ ಹಾಗೂ ಭಕ್ತಿಭಾವವನ್ನು ಪ್ರತಿಬಿಂಬಿಸುವ ಮಹತ್ವದ ಉತ್ಸವವಾಗಿದೆ. ಹೀಗಾಗಿ ಗ್ರಾಮದ ಪ್ರತಿಯೊಬ್ಬರೂ ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ವಿಶೇಷವಾಗಿ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯ, ವಿದ್ಯುತï ದೀಪಗಳ ವ್ಯವಸ್ಥೆ, ಸುಗಮ ಸಂಚಾರ, ವಾಹನಗಳ ಪಾರ್ಕಿಂಗ್, ರಸ್ತೆ ಸೌಲಭ್ಯ ಹಾಗೂ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಚರ್ಚಿಸಿದರು.
ಜಾತ್ರಾ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮುಂದಿಟ್ಟ ಸಲಹೆಗಳನ್ನು ಆಲಿಸಿದ ಅವರು, ಭಕ್ತಾದಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಮತ್ತು ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮದ ಹಿರಿಯರು, ಗ್ರಾಮಸ್ಥರು,ಜಾತ್ರಾ ಕಮಿಟಿಯ ಪದಾಧಿಕಾರಿಗಳು ಇದ್ದರು.