ರೈತರ ಸಾಲ ಮನ್ನಾ ಮಾಡಿ
|ರಾಜ್ಯ ಸರ್ಕಾರಕ್ಕೆ ಶಾಸಕ ಐಹೋಳೆ ಒತ್ತಾಯ | ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ
ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಸಂಕಷ್ಟದಲ್ಲಿರುವ ಪ್ರತಿ ರೈತರಿಗೆ ೫೦ ಸಾವಿರ ಪ್ರೋತ್ಸಾಹಧನ ನೀಡಬೇಕು ಹಾಗೂ ೫ ಲಕ್ಷ ರೂ,ವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತಾಲೂಕಿನ ಕರೋಶಿ ಗ್ರಾಮದಲ್ಲಿ ಜೈನಾಪುರ-ಕರೋಶಿ ಸಂಪರ್ಕಿಸುವ ರಸ್ತೆಯಲ್ಲಿ ೨ ಕೋಟಿ ರೂ.ವೆಚ್ಚದಲ್ಲಿ ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಸ್ಪಂದಿಸಿದ್ದು, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸುವ ಕುರಿತು ಸಮಿತಿ ರಚಿಸಿದೆ. ಸಮಿತಿಯು ಒಂದು ವಾರದಲ್ಲಿ ವರದಿ ನೀಡುವ ಭರವಸೆಯಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೂಡಲೇ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ವಹಿಸಬೇಕು ಎಂದರು.
ಸಂಜಯ ಕುಮಾರ ಪಾಟೀಲ, ರಾಜಶೇಖರ ಖಣದಾಳೆ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಕೆ ಎಂಟೆvತಿನವರ,ವಿಜಯ ಕೋಠಿವಾಲೆ ಇತರರಿದ್ದರು.