ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ಕ್ರಮ
| ಹುಕ್ಕೇರಿ ತಹಶಿಲ್ದಾರ ಕಟ್ಟಿಮನಿ ಭರವಸೆ | ಜನಸ್ಪಂದನ ಕಾರ್ಯಕ್ರಮದಲ್ಲಿ ೯೫ ಅರ್ಜಿ ಸಲ್ಲಿಕೆ
ವಿಜಯವಾಣಿ ಸುದ್ದಿಜಾಲ ದಡ್ಡಿ
ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದರೆ ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹುಕ್ಕೇರಿ ತಹಶಿಲ್ದಾರ ಬಲರಾಮ ಕಟ್ಟಿಮನಿ ತಿಳಿಸಿದರು.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ಧೇಶವಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳಿಗಾಗಿ ತಾಲೂಕು ಹಾಗೂ ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯವಾಗಿಯೇ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
೯೫ ಅರ್ಜಿಗಳ ಸಲ್ಲಿಕೆ :
ದಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ, ಆಂಬ್ಯುಲೆನ್ಸ್ ಸೇವೆ ಒದಗಿಸುವುದು, ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ರಸ್ತೆ, ಕುಡಿಯುವ ನೀರು ಹಾಗೂ ಇತರ ಮೂಲಸೌಕರ್ಯ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಒಟ್ಟು ೯೫ ಅರ್ಜಿಗಳು ಸಲ್ಲಿಸಿದರು.
ಹುಕ್ಕೇರಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡ, ಸಹಾಯಕ ಕೃಷಿ ನಿರ್ದೇಶಕ ಮಹಾದೇವ ಪಟಗುಂದಿ, ಡಾ.ಉದಯ ಕುಡಚಿ, ವಿಷ್ಣು ರೇಡೆಕರ, ಕಿರಣ ರಜಪೂತ, ದಯಾನಂದ ಪಾಟೀಲ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾರುತಿ ಕಾಂಬಳೆ, ಸಂತೋಷ ಕಬ್ಬಗೋಳ ಇತರರಿದ್ದರು.