ವಿಜಯವಾಣಿ ಸುದ್ದಿಜಾಲ ಧಾರವಾಡ
ಅಲೆಮಾರಿ ಸಮುದಾಯಗಳಿಗೆ ನ್ಯಾಯಾಲಯ ತೀರ್ಪಿನಂತೆ ಒಳಮೀಸಲಾತಿ ಕಲ್ಪಿಸುವುದು ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ಡಿ. 18ರಂದು ಬೆಳಗಾವಿ ಸುವರ್ಣಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾಧ್ಯಕ್ಷ ದುರ್ಗಪ್ಪ ಡೊಕ್ಕಣ್ಣವರ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದ್ಧವಾಗಿ ಪರಿಶಿಷ್ಟ ಜಾತಿಗಳ ಒಟ್ಟು 101 ಜಾತಿಗಳ ಪಟ್ಟಿಯಲ್ಲಿ 49 ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರಿಶಿಷ್ಟ ಜಾತಿ ಅಲೆಮಾರಿ ಜಾತಿಗಳು ಒಳಗೊಂಡಿರುತ್ತವೆ. ಆದರೆ ಸರ್ಕಾರದ ಮೀಸಲಾತಿ ಪಡೆಯುವಲ್ಲಿ ಬಹುತೇಕ ವಿಫಲವಾದಂತಾಗಿದೆ ಎಂದರು.
ರಾಜ್ಯದ ಹಂಪಿ ಕನ್ನಡ ವಿವಿಯಲ್ಲಿ ಅಲೆಮಾರಿ ಬುಡಕಟ್ಟು ಅಧ್ಯಯನ ಕೇಂದ್ರ ಸ್ಥಾಪನೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಒಳಗೊಂಡಂತೆ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ವೀರೇಶ ಕೆ., ದುರ್ಗಪ್ಪ ಗಡ್ಡದವರ, ಇತರರು ಇದ್ದರು.