ಜಿಲ್ಲೆ

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ

ಬಳ್ಳಾರಿ ; ಜಿಲ್ಲೆಯಲ್ಲಿ ಜರುಗಲಿರುವ ಶಂಕರಾಚಾರ್ಯ, ಭಗೀರಥ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮೇ.02 ರಂದು ಶಂಕರಾಚಾರ್ಯ, ಮೇ.05 ಭಗೀರಥ ಮತ್ತು ಮೇ. 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳನ್ನು ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಮೇ. 02 ರಂದು ಆದ್ಯ ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ನಗರದ ಸಂಗನಕಲ್ಲು ರಸ್ತೆಯ ಶೃಂಗೇರಿ ಶಂಕರಚಾರ್ಯ ಮಠದ ಭಾರತಿ ತೀರ್ಥ ಸಭಾಭವನದಲ್ಲಿ ಆಯೋಜಿಸಲಾಗುವುದು. ಜಯಂತಿಯ ಅಂಗವಾಗಿ ಮೆರವಣಿಗೆಯು ನಡೆಯಲಿದೆ ಎಂದು ತಿಳಿಸಿದರು.

ಮೇ.05 ರಂದು ಭಗೀರಥ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಇದಕ್ಕೂ ಮುನ್ನ ನಗರದ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ.

ಮೇ.10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ಮೆರವಣಿಗೆಯು ಒಳಗೊಂಡಿರಲಿದೆ ಎಂದು ತಿಳಿಸಿದರು.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಸ್ವಚ್ಛತೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.

ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ-ಸೂಚನೆ ನೀಡಿದರು.