ಬೆಳಗಾವಿ ಕಾಡಾ ಕಚೇರಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ಶಾಸಕ ಸೋಮಶೇಖರ ರೆಡ್ಡಿ ಅವರು ಮನವಿ ಸಲ್ಲಿಸಿದರು. ದಮ್ಮೂರ್ ಶೇಖರ್, ಘೂಳಪ್ಪ ಹೊಸಮನಿ ಇದ್ದರು.  
ಜಿಲ್ಲೆ

ಬಳ್ಳಾರಿ ಜಿಲ್ಲೆ ಅಭಿವೃದ್ಧಿಗೆ ಸಹಕರಿಸುವೆ

ಬೆಳಗಾವಿ: ರೈಲ್ವೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿ ವಿಚಾರವಾಗಿ ಬಳ್ಳಾರಿ ಜಿಲ್ಲೆಗೆ ಖುದ್ದು ಭೇಟಿ ನೀಡುತ್ತೇನೆ. ಜಿಲ್ಲೆಗೆ ಎಲ್ಲ ರೀತಿಯಲ್ಲಿ ಸಹಕಾರವನ್ನೂ ಕೊಡುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಬೆಳಗಾವಿ ನಗರದ ಕಾಡಾ ಕಚೇರಿಗೆ ಬುಧವಾರ ಆಗಮಿಸಿದ್ದ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಅವರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಬಳ್ಳಾರಿ ಜಿಲ್ಲೆಯಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ, ಮೇಲ್ಸೇತುವೆ ನಿರ್ಮಾಣ ಹಾಗೂ ಇನ್ನಿತರ ಕಾಮಗಾರಿಗಳ ಅನುಷ್ಠಾನಕ್ಕಾಗಿ ಶೀಘ್ರದಲ್ಲೇ ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದರು.

ರೈಲ್ವೆ ಮೂಲಕ ನಗರ, ಹಳ್ಳಿಗಳನ್ನು ಸಂಪರ್ಕಿಸುವುದು, ರೈತರ ಉತ್ಪನ್ನಗಳ ಸಾಗಣೆಗೆ ಅನುಕೂಲ ಸೇರಿದಂತೆ ದೇಶಾದ್ಯಂತ ಇಲಾಖೆಯ ಕಾಮಗಾರಿ ನಡೆಯುತ್ತಿದೆ. ಅದರಂತೆ ಬಳ್ಳಾರಿ ಜಿಲ್ಲೆಯಲ್ಲಿಯೂ ರೈಲ್ವೆ ಇಲಾಖೆಗೆ ಸಂಬಂಧಿಸಿದ ಎಲ್ಲ ಕಾರ್ಯಗಳಿಗೆ ಸಹಕಾರ ನೀಡಲಾಗುವುದು. ಶಾಸಕರು, ಸಂಸದರು ಸಲ್ಲಿಸಿದ ಬೇಡಿಕೆಯನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರ್ ಶೇಖರ್, ಬೆಳಗಾವಿ ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಬೆಳಗಾವಿ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಇನ್ನಿತರರು ಇದ್ದರು.