ಜಿಲ್ಲೆ

ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ವಿವಿಧ ಇಲಾಖೆಗಳ ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವದರೊಂದಿಗೆ ಕಾನೂನಾತ್ಮಕವಾಗಿ ಮಕ್ಕಳ ಹಿತ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಬಾಲ್ಯವಿವಾಹ, ಪೋಕ್ಸೋ, ಆರ್‌ಟಿಐ ಕಾಯ್ದೆ ಹಾಗೂ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಮೇಲೆ ದೌರ್ಜನ್ಯವಾದಲ್ಲಿ ಭವ್ಯ ಸಂವಿಧಾನದಡಿ ಬಾಲ್ಯ ವಿವಾಹ ನಿಷೇಧ, ಶಿಕ್ಷಣ ಹಕ್ಕು ಕಾಯ್ದೆ, ಪೋಕ್ಸೋ, ಸೇರಿದಂತೆ ಇನ್ನಿತರೆ ಕಾನೂನನಡಿ ಕಠಿಣ ಶಿಕ್ಷಣವಿದ್ದು, ಕಳೆದ ಮೂರು ವರ್ಷದಲ್ಲಿ ರಾಜ್ಯದೆಡೆ ಹತ್ತು ಸಾವಿರಕ್ಕೂ ಹೆಚ್ಚು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, 202 ಪ್ರಕರಣಗಳಿಗೆ ಶಿಕ್ಷೆ ಪ್ರಕಟವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಹಿತರಕ್ಷಣೆಗೆ ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕಿದೆ ಎಂದರು.

ಸಮಾಜದ ಪ್ರತಿಯೊಬ್ಬರೂ ಮಕ್ಕಳ ವಿಷಯದಲ್ಲಿ ಅತ್ಯಂತ ಸೂಕ್ಷ್ಮತೆ ಪ್ರದರ್ಶಿಸಿ, ಸಂವೇದನಾ ಶೀಲತೆ ಉಳಿಸಿಕೊಳ್ಳಬೇಕಿದೆ. ಪ್ರಸ್ತುತ ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಶಿಶು ಮರಣ ಸಂಖ್ಯೆ 17 ಸಾವಿರ, ನಿರ್ಜೀವ ಶಿಶು ಮರಣ ಸಂಖ್ಯೆ 21 ಸಾವಿರ ಹಾಗೂ ತಾಯಿ ಮರಣ ಸಂಖ್ಯೆ 2079 ಇದ್ದೂ, ಸುಸ್ಥಿರ ಅಭಿವೃದ್ಧಿ ಗುರಿ 17 ಕಾರ್ಯಕ್ರಮಗಳಲ್ಲಿ 9 ಕಾರ್ಯಕ್ರಮಗಳು ಮಕ್ಕಳ ಮತ್ತು ಮಹಿಳೆಯರ ಸಂಬಂಧ ಪಟ್ಟಂತೆ ಇವೆ. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಮಕ್ಕಳಪರ ಕಾಳಜಿ ವಹಿಸಿಕೊಂಡು ವ್ಯವಸ್ಥಿತವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿನ ಅನಿಷ್ಠ ಪದ್ಧತಿ-ಪಿಡುಗು ಹೋಗಲಾಡಿಸುವುದಕ್ಕೆ ಸಾಧ್ಯ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಮಾತನಾಡಿ, ಮಕ್ಕಳನ್ನು ಕಾನೂನಾತ್ಮಕಾವಾಗಿ ಕಾಯುವ ಕೆಲಸವನ್ನು ಸರ್ಕಾರ ಹಾಗೂ ಸರ್ಕಾರವನ್ನು ಪ್ರತಿನಿಧಿಸುವ ಸಂಸ್ಥೆಗಳ ಜವಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ, ಆರ್‌ಟಿಇ ಕಾಯ್ದೆ ಹಾಗೂ ಮಕ್ಕಳ ರಕ್ಷಣೆ ಕಾಯ್ದೆಗಳ ಕುರಿತು ಆಯೋಜನೆ ಮಾಡಿರುವ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಎಚ್.ವಿಜಯ್ ಕುಮಾರ , ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಮಾತನಾಡಿದರು. ಇದೇ ವೇಳೆ ಮಕ್ಕಳ ಸಹಾಯವಾಣಿ-1098 ಹಾಗೂ ಪೋಕ್ಸೋ ಕಾಯ್ದೆಯ ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.