ಜಿಲ್ಲೆ

ಸರ್ಕಾರ ಬಸ್ ದರ ಹೆಚ್ಚಳ ಹಿಂಪಡೆಯಲಿ

ಬಳ್ಳಾರಿ : ಇತ್ತೀಚೆಗೆ ರಾಜ್ಯ ಸರ್ಕಾರ ಹೆಚ್ಚಿಸಿರುವ ಬಸ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ನ ಹೇಳಿದರು.

ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಜೆಡಿಎಸ್ ವತಿಯಿಂದ ಬಸ್ ದರ ಏರಿಕೆ ಖಂಡಿಸಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನಸಾಮಾನ್ಯರ ಮೇಲೆ ದರ ಹೆಚ್ಚಳದ ಹೊರೆ ಹೊರಿಸಿದೆ. ಸುದ್ರವಾಗಿದ್ದ ಕರ್ನಾಟಕದ ಅರ್ಥಿಕತೆಯನ್ನು ಕಾಂಗ್ರೆಸ್ ಸರ್ಕಾರ ಹದಗೆಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆ ದಿವಾಳಿಯಾಗಿದ್ದು, ಈಗಾಗಲೇ ರಾಜ್ಯ ಸಾರಿಗೆ ಸಂಸ್ಥೆಗೆ 2 ಸಾವಿರ ಕೋಟಿ ರೂ., ಸಾಲ ಪಡೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ, ಅದರ ನಷ್ಟವನ್ನು ಸರಿದೂಗಿಸಲು ದರ ಹೆಚ್ಚಿಸಿ ಪುರುಷ ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ರಾಜ್ಯ ಸರ್ಕಾರದ ಈ ತೀರ್ಮಾನ ಬಡವರ ವಿರೋಧಿ ಕ್ರಮವಾಗಿದೆ ಎಂದರು.