ಬಳ್ಳಾರಿ : ದಮನಿತರು, ಬಡವರು, ಮಹಿಳೆಯರು, ಎಚ್‌ಐವಿ ಸೋಂಕಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳು ತಲುಪುವಂತಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಆಹಾರ ಪಡಿತರ ಚೀಟಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯ ಸರ್ಕಾರ ನಡೆಸುತ್ತಿರುವ ವಿಮುಕ್ತ ದೇವದಾಸಿಯವರ ಮರುಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯದಲ್ಲಿ ಯಾರು ತಪ್ಪದೇ ಭಾಗವಹಿಸಿ ಮಾಹಿತಿ ನೋಂದಯಿಸಬೇಕು. ಪ್ರಸ್ತುತ ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ವಿಮುಕ್ತ ದೇವದಾಸಿಯರ ಮಕ್ಕಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಎಲ್ಲ ಆಯಾಮಗಳಲ್ಲಿ ಮುನ್ನೆಲೆಗೆ ತರುವ ಆಶಾಭಾವನೆ ಹೊಂದಿದೆ. ಅವರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಅನುಷ್ಠಾನಕ್ಕಾಗಿ ಸಮೀಕ್ಷೆ ನಡೆಸುತ್ತಿದೆ. ತಪ್ಪದೇ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕೋರಿದರು.
150 ಪ್ರಶ್ನಾವಳಿಗಳ ಈ ಸಮೀಕ್ಷಾ ಕಾರ್ಯವು 45 ದಿನಗಳ ಕಾಲ ನಡೆಯಲಿದ್ದು, ಈಗಾಗಲೇ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಮೀಕ್ಷೆಯಲ್ಲಿ ಸಮೀಕ್ಷಾದಾರರು ಯಾವುದೇ ಕಾರಣಕ್ಕೂ ರಜೆ ಹಾಕುವಂತಿಲ್ಲ . ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳು ಇದ್ದು, ಅಧಿಕಾರಿಗಳು ವಿಳಂಬ ತೋರದೇ ಅನುಷ್ಠಾನಗೊಳಿಸಬೇಕು ಎಂದರು.
ಎಡಿಸಿ ಮಹಮ್ಮದ್ ಎನ್.ಜುಬೇರ್ ಮಾತನಾಡಿ, ಜಿಲ್ಲೆಯಲ್ಲಿ ವಿಮುಕ್ತ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯಿಂದ ಸೌಲಭ್ಯ ಒದಗಿಸಲು ಅನುಕೂಲವಾಗಲಿದೆ. ಉದ್ಯಮ ಆರಂಭಿಸುವವರಿಗೆ ಬ್ಯಾಂಕ್ ಗಳಲ್ಲಿ ಲೋನ್ ವಿತರಣೆ ಕುರಿತಂತೆ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಸಭೆಯಲ್ಲಿ ವಿಮುಕ್ತ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ನಾನಾ ಬೇಡಿಕಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಬಳಿಕ ವಿಮುಕ್ತ ದೇವದಾಸಿಯರ ಮರುಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಕುರಿತ ಮಾಹಿತಿ ಭಿತ್ತಿಚಿತ್ರಗಳನ್ನು ಅನಾವರಣಗೊಳಿಸಲಾಯಿತು. ಜಿಲ್ಲೆಯಲ್ಲಿ ಸಮಾಜಸೇವೆ ಸಲ್ಲಿಸಿದ ಲಿಂಗತ್ವ ಅಲ್ಪಸಂಖ್ಯಾತರಾದ ಲಕ್ಷಮ್ಮ, ಪರ್ವಿನ್ ಭಾನು, ರಾಜಮ್ಮ, ಸಲ್ಮಾ ಮತ್ತು ಕೆ.ಎನ್.ರೇಣುಕಾ ಪೂಜಾರ್ ಅವರನ್ನು ಸನ್ಮಾನಿಸಲಾಯಿತು.