ಬಳ್ಳಾರಿ : ಇಲ್ಲಿನ ನೂತನ ಡಿಸಿ ಕಚೇರಿ ಆವರಣದಲ್ಲಿ ಸೆ.29 ರಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಜನಸ್ಪಂದನ ಆಯೋಜಿಸಿದ್ದು, ವ್ಯವಸ್ಥಿತವಾಗಿ ನಡೆಯಲಿ ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಕುರಿತು ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜನಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ ಎಂದರು.
ನಾನಾ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಉಪಕರಣ ಹಾಗೂ ಸಿಬ್ಬಂದಿ ನಿಯೋಜಿಸಬೇಕು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಮಾಹಿತಿ ಇಟ್ಟುಕೊಂಡಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಅಂಗವಿಕಲರು ಹಾಗೂ ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ, ಕುಡಿವ ನೀರು ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಕುಂದುಕೊರತೆಗಳನ್ನು ಸರಿಯಾಗಿ ಪರಿಹರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಇಲಾಖೆಗಳು ಅಗತ್ಯ ಮಾಹಿತಿಯೊಂದಿಗೆ ಸಿದ್ಧರಾಗಿರಬೇಕು ಎಂದರು.
ಅಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ನಾನಾ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 02 ಗಂಟೆಗೆ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಕೆಡಿಪಿ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.