ಜಿಲ್ಲೆ

ಅಗತ್ಯ ಮಾಹಿತಿಯೊಂದಿಗೆ ಅಧಿಕಾರಿಗಳು ಹಾಜರಾಗಿ

ಬಳ್ಳಾರಿ : ಜ. 16, 17 ಹಾಗೂ 18 ರಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಜಿಲ್ಲೆಗೆ ಭೇಟಿ ನೀಡಲಿದ್ದು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಡಿಸಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿಸಭೆಯಲ್ಲಿ ಮಾತನಾಡಿದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ನಡೆಸಲಿದ್ದು ಮಾಹಿತಿ ಒದಗಿಸಬೇಕು.

ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸುವರು. ಲೋಕಾಯುಕ್ತ ಪ್ರಕರಣ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಸೂಕ್ತ ಕಾರಣವನ್ನು ಉಪ ಲೋಕಾಯುಕ್ತರ ಗಮನಕ್ಕೆ ತರಬೇಕು ಎಂದರು.

ಬಾಕಿ ಉಳಿದಿರುವ ಲೋಕಾಯುಕ್ತ ದೂರು ಅರ್ಜಿಗಳನ್ನು ವೈಯಕ್ತಿಕ ಗಮನಹರಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ವಿಲೇವಾರಿ ಮಾಡಲು ಕಾನೂನು ಚೌಕಟ್ಟಿನಲ್ಲಿ ಅವಕಾಶವಿಲ್ಲದಿದ್ದಲ್ಲಿ ದೂರುದಾರರರಿಗೆ ಹಿಂಬರಹ ನೀಡಬೇಕು. ಹಿಂಬರಹ ನೀಡಿರುವ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಬಅಧಿಸಿದ ಇಲಾಖಾಧಿಕಾರಿಗಳು ಹೊಂದಿರಬೇಕು ಎಂದು ನಿರ್ದೇಶಿಸಿದರು.

ಉಪ ಲೋಕಾಯುಕ್ತರಿಂದ ವಿಡಿಯೋ ಸಂವಾದ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಶೌಚಾಲಯ, ವಸತಿ ನಿಲಯಗಳ ಕಾಂಪೌಂಡ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸುವ್ಯವಸ್ಥಿತದಲ್ಲಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿನ ಎಲ್ಲ ಶಾಲೆಗಳಿಗೆ ಸೂಕ್ತ ಕಟ್ಟಡದ ವ್ಯವಸ್ಥೆ, ಶಾಲಾ ಮಕ್ಕಳಿಗೆ ಬಾಗ, ಶೂ-ಸಾಕ್ಸ್ ಹಾಗೂ ಬಿಸಿಯೂಟದ ವ್ಯವಸ್ಥೆ ಮತ್ತು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳು ಅಚ್ಚುಕಟ್ಟಾಗಿರಬೇಕು ಎಂದು ಡಿಡಿಪಿಐ ಅಧಿಕಾರಿಗಳಿಗೆ ತಿಳಿಸಿದರು.

ಖಾತಾ ಬದಲಾವಣೆಗೆ ಸಂಬಂಧಿಸಿದಅತೆ ಬಾಕಿ ಇರುವ ಪ್ರಕರಣಗಳು, ಕಸ ವಿಲೇವಾರಿ, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಘಟಕಗಳ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಕಂದಾಯ, ಡಿಎಂಎಫ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜೆಸ್ಕಾಂ, ಸಾರಿಗೆ, ಆಹಾರ, ಅಬಕಾರಿ, ಜೆಸ್ಕಾಂ, ಆರೋಗ್ಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸಬೇಕು. ಯಾವುದೇ ರೀತಿಯಲ್ಲಿ ವಿಳಂಬವಾಗುವಂತಿಲ್ಲ. ಯಾವುದೇ ಅಕ್ರಮಗಳಿಗೆ ಅಧಿಕಾರಿಗಳು ಅಸ್ಪದ ನೀಡಬಾರದು ಎಂದರು.