ಜಿಲ್ಲೆ

ಗರ್ಭಿಣಿಯರು ಕ್ಯಾಲ್ಸಿಯಂ ಮಾತ್ರೆ ಸೇವಿಸಿ

ಬಳ್ಳಾರಿ : ಗರ್ಭಿಣಿಯರು ತಪ್ಪದೆ ಕ್ಯಾಲ್ಸಿಯಂ ಮಾತ್ರೆ ಸೇವಿಸುವುದರಿಂದ ರಕ್ತಹೀನತೆಯಿಂದ ಆಗುವ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಕಲಬುರಗಿಯ ವಿಭಾಗೀಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ ಹೇಳಿದರು.

ನಗರದ ಡಿಎಚ್ಒ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪ್ರಸೂತಿ ತಜ್ಞರು ಹಾಗೂ ವೈದ್ಯಾಧಿಕಾರಿಗಳಿಂದ ಗರ್ಭಿಣಿಯರು ಆರೋಗ್ಯ ತಪಾಸಣೆಗೆ ಒಳಪಡಬೇಕು. ಕ್ಷಯಮುಕ್ತ ಕರ್ನಾಟಕವನ್ನಾಗಿಸಲು ಪ್ರತಿಯೊಬ್ಬರೂ ಜಾಗುರಕರಾಗಿ ಸಂಘ ಸಂಸ್ಥೆಗಳ ಜತೆಗೆ ಕೈ ಜೋಡಿಸಿ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಡಿಯಲ್ಲಿ ಆರೋಗ್ಯ ತಪಾಸಣೆ ಜತೆಗೆ ಟೆಲಿಮನಸ್ ಕುರಿತು ವ್ಯಾಪಕ ಪ್ರಚಾರ ನೀಡಬೇಕು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಡೆಂಘೆ ಪ್ರಕರಣಗಳ ಬಗ್ಗೆ ಹಾಗೂ ಲಾರ್ವಾ ಸಮೀಕ್ಷೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.